ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಹಿಂಪಡೆಯುವಂತೆ ಆಗ್ರಹಿಸಿ ಮನವಿ

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಹಿಂಪಡೆಯುವಂತೆ ಆಗ್ರಹಿಸಿ ಮನವಿ


ಬಂಟ್ವಾಳ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಹಿಂಪಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಬುಧವಾರ ಬಂಟ್ವಾಳ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಸರಕಾರದ ಈ ನಿರ್ಧಾರದಿಂದ ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಮಿತಿ, ಮೈಸೂರು ದಸರಾ ಕೇವಲ ಒಂದು ಸಾಂಸ್ಕೃತಿಕ ಹಬ್ಬವಲ್ಲ, ಬದಲಾಗಿ ಕರ್ನಾಟಕದ ಅತ್ಯಂತ ದೊಡ್ಡ ಧಾರ್ಮಿಕ ಮತ್ತು ಪಾರಂಪರಿಕ ಹಬ್ಬವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನವರಾತ್ರಿಯಲ್ಲಿ ದೇವಿಯ ಆರಾಧನೆ ನಡೆಯುತ್ತಿದ್ದು, 10ನೇ ದಿನ ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹಾರ ಮಾಡಿದ ವಿಜಯೋತ್ಸವವನ್ನು ಆಚರಿಸಲಾಗುತ್ತದೆ. ಇಂತಹ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿಸಲ್ಪಡುವ ಮುಖ್ಯ ಅತಿಥಿಯು ದೇವಿಯ ಮೇಲೆ ಶ್ರದ್ಧೆ, ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಭಾನು ಮುಷ್ತಾಕ್ ಅವರು ಈ ಹಿಂದೆ ಮಾಡಿದ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರಲ್ಲದೆ, ದತ್ತಪೀಠ ಹೋರಾಟದ ಸಂದರ್ಭದಲ್ಲೂ ಅವರು ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹವರನ್ನು ಹಿಂದೂಗಳ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿಸುವುದು ಸೂಕ್ತವಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಭಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಮತ್ತು ಮೈಸೂರು ದಸರಾ ಹಬ್ಬದ ಪಾವಿತ್ರ್ಯವನ್ನು ಕಾಪಾಡಲು ಡಾ. ಎಸ್.ಎಲ್. ಭೈರಪ್ಪ ಅವರಂತಹ ಹಿರಿಯ ಸಾಹಿತಿಗಳಿಂದ ಉದ್ಘಾಟಿಸಲು ಆಹ್ವಾನಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ವಿವೇಕಾನಂದ ಯುವಕ ಸಂಘ ಅಧ್ಯಕ್ಷ ನಾಗೇಶ್ ದಾಸ್, ನ್ಯಾಯವಾದಿಗಳಾದ ಅಶ್ವಿನಿ, ಸುಚಿತ್ರ, ಪ್ರಮುಖರಾದ ಸದಾಶಿವ, ಸುರೇಶ್ ರೈ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article