ಅ.27 ರಂದು ಸಾಂಸ್ಕೃತಿಕ ಭವನ ಲೋಕಾರ್ಪಣೆ
ಮಂಗಳೂರು: ಗಡಿನಾಡಿನ ಕನ್ನಡಪರ ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರಡಾಲದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅ.27ರಂದು ಲೋಕಾರ್ಪಣೆಯಾಗಲಿದೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇವೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಅಧಿಕಾರಿಗಳ ಜತೆ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 2 ಕೋಟಿ ರು. ವೆಚ್ಚದಲ್ಲಿ ಈ ಭವನ ನಿರ್ಮಾಣವಾಗಿದೆ. ಇದಕ್ಕಾಗಿ ಕಯ್ಯಾರ ಅವರ ಮಕ್ಕಳು ಒಂದು ಎಕರೆಗೂ ಅಧಿಕ ಜಾಗವನ್ನು ಉಚಿತವಾಗಿ ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಅಲ್ಲಿನ ರಸ್ತೆಗೂ ಜಾಗ ಬಿಟ್ಟುಕೊಟ್ಟಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಈ ಸುಸಜ್ಜಿತ ಸಾಂಸ್ಕೃತಿಕ ಭವನದಲ್ಲಿ ಗ್ರಂಥಾಲಯ, ಗ್ರೀನ್ ರೂಂ, ಸಭಾಂಗಣ, ಪೀಠೋಪಕರಣಗಳು ಮತ್ತಿತರ ಸೌಕರ್ಯಗಳಿವೆ. ಗಡಿನಾಡಿನ ಕನ್ನಡಿಗರಿಗೆ ಅತ್ಯಂತ ಕಡಿಮೆ ನಿರ್ವಹಣಾ ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಈ ಭವನವನ್ನು ನೀಡಲಾಗುವುದು ಎಂದು ಸೋಮಣ್ಣ ಹೇಳಿದರು.
ಪ್ರಾಧಿಕಾರದ ವ್ಯಾಪ್ತಿಗೆ ಬರುವ 6 ರಾಜ್ಯಗಳ, 19 ಜಿಲ್ಲೆಗಳ 658 ಕನ್ನಡ ಶಾಲೆಗಳಲ್ಲಿ 1.09 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗಳಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ನೆರವು ನೀಡುತ್ತಿದೆ. ಈ ಶಾಲೆಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಪೂರೈಸುವ ಪ್ರಸ್ತಾಪ ಇದೆ ಎಂದು ತಿಳಿಸಿದರು.
ಮಂಗಳೂರಿನ ಉರ್ವಸ್ಟೋರ್‌ನಲ್ಲಿ ತುಳುಭವನ ನಿರ್ಮಾಣಕ್ಕೆ 3.60 ಕೋಟಿ ರು., ಕೊಂಕಣಿ ಭವನ ನಿರ್ಮಾಣಕ್ಕೆ 3 ಕೋಟಿ ರು., ಬ್ಯಾರಿ ಭವನ ನಿರ್ಮಾಣಕ್ಕೆ ? 3 ಕೋಟಿ ಅನುದಾನ ನೀಡಿದ್ದೇವೆ. ಈ ಪೈಕಿ ತುಳು ಭವನ ಈಗಾಗಲೇ ನಿರ್ಮಾಣವಾಗಿದೆ. ಕೊಂಕಣಿ ಭವನ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಬ್ಯಾರಿ ಭವನ ಕಾಮಗಾರಿ ಆರಂಭವಾಗಿಲ್ಲ. ಶೀಘ್ರದಲ್ಲೇ ಅಸೈಗೋಳಿಯಲ್ಲಿ ಆರಂಭಿಸುವ ಭರವಸೆ ದೊರೆತಿರುವುದರಿಂದ ಅದಕ್ಕೆ ಮೀಸಲಿಟ್ಟ ಅನುದಾನವನ್ನು ವಾಪಸ್ ಪಡೆಯುತ್ತಿಲ್ಲ. ಇನ್ನು ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ 5 ಕೋಟಿ ರೂ. ಒದಗಿಸಿದ್ದೇವೆ ಎಂದು ಸೋಮಣ್ಣ ಹೇಳಿದರು.
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 11 ಸಾವಿರ ಚದರ ಅಡಿ ಜಾಗ ಖರೀದಿಸಿದ್ದು, ಇದಕ್ಕಾಗಿ 5.15 ಕೋಟಿ ರೂ. ಅನುದಾನ ನೀಡಲಾಗಿದೆ. ಶೀಘ್ರ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯಲಿದೆ. ಮಹಾರಾಷ್ಟ್ರದ ಅಕ್ಕಲಕೋಟೆಯಲ್ಲೂ 2 ಕೋಟಿ ರು. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣವಾಗಲಿದೆ ಎಂದರು.
ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಇದ್ದರು.
ಕಾಸರಗೋಡಲ್ಲಿ ಕನ್ನಡ ನಾಮಫಲಕಕ್ಕೆ ನಿರ್ದೇಶನ:
ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಕ್ಷೀಣಿಸುತ್ತಿರುವ ಬಗ್ಗೆ ಬಂದ ದೂರುಗಳ ಆಧಾರದಲ್ಲಿ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಗೆ ಪ್ರಾಧಿಕಾರದಿಂದ ಪತ್ರ ಬರೆಯಲಾಗಿತ್ತು. ಕೇಂದ್ರ ಇಲಾಖೆಯು ಕೇರಳ ಸರ್ಕಾರಕ್ಕೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇರಳ ಸರ್ಕಾರ, ಗಡಿನಾಡಿನ ಬಸ್ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಸೇರಿದಂತೆ ಹಿಂದೆ ಇದ್ದ ಕಡೆಗಳಲ್ಲೆಲ್ಲ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ವಹಿಸುವಂತೆ ಎನ್‌ಎಚ್‌ಎಐ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ ಎಂದು ಸೋಮಣ್ಣ ಬೇವಿನಮರದ ತಿಳಿಸಿದರು.