ತಿಮರೋಡಿ ಗಡಿಪಾರಿಗೆ ಅ.8ರ ತನಕ ತಡೆ

ತಿಮರೋಡಿ ಗಡಿಪಾರಿಗೆ ಅ.8ರ ತನಕ ತಡೆ


ಮಂಗಳೂರು: ಸೌಜನ್ಯ ಪರ ನ್ಯಾಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅ.೮ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶ ಜಾರಿಗೆ ಅ.8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ನಡುವೆ ಶಸ್ತ್ರಾಸ್ತ್ರ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಬಂಧನದ ಭೀತಿಯಲ್ಲಿರುವ ತಿಮರೋಡಿ ಈಗಾಗಲೇ ತಲೆಮರೆಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಮೂರು ಬಾರಿ ನೋಟಿಸ್ ಜಾರಿಯಾದರೂ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article