
ಸವಲತ್ತು ನೀಡಲು ವಿಳಂಬ: ತಹಶೀಲ್ದಾರ್‌ಗಳ ವಿರುದ್ಧ ದೂರು ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ಗಳ ಮತ್ತು ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪವು ಕೇಳಿಬಂದಿರುತ್ತದೆ.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ, ವಿನಾಕಾರಣ ಲೋಕಾಯುಕ್ತ ಹಾಗೂ ಇದು ಲೋಕಾಯುಕ್ತ ಕಾಯ್ದೆಯಡಿ "ದುರಾಡಳಿತ" ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ.
ಸರ್ಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ್ವಯ, ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸಹ, ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು, ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಹಾಗೂ ನಿವೇಶನವನ್ನು ನೀಡಲು ಯಾವುದೇ ಕ್ರಮ ಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ, ದೂರಿನಲ್ಲಿ ಹಿತಾಸಕ್ತಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಮಂಗಳೂರು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.