ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ

ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ


ಮಂಗಳೂರು: ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಭಾಷಾ ಮತ್ತು ಸಾಹಿತ್ಯ ಭವನಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ತುಳು ಭವನದ ಹಲವು ಕಾಮಗಾರಿ ಬಾಕಿ ಇರುತ್ತದೆ. ಕೊಂಕಣಿ ಭವನದ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಬ್ಯಾರಿ ಭವನಕ್ಕೆ ನಿವೇಶನ ಗುರುತಿಸಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಈ ಎಲ್ಲಾ ಭವನಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅನುದಾನ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದ್ದಾರೆ.

ಜಿಲ್ಲಾ ರಂಗಮಂದಿರ ನಗರದ ಬೊಂದೆಲ್‌ನಲ್ಲಿ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಮಹಾನಗರಪಾಲಿಕೆ ಕಾಮಗಾರಿ ಟೆಂಡರ್ ಕರೆದಿರುತ್ತದೆ. ಕಾಸರಗೋಡು ಬದಿಯಡ್ಕದಲ್ಲಿ ಡಾ. ಕೈಯಾರ ಕಿಞ್ಞಣ್ಣ ರೈ ಸಭಾಭವನ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಂದ  ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವ ವಿವಿಧ ಭವನಗಳ ಕಾಮಗಾರಿಗೆ ಹೆಚ್ಚುವರಿ ಅನುದಾನ ಕೋರಿ ಏಕ ಕಡತದಲ್ಲಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ, ಬೇವಿನಮರದ ಕಾರ್ಯದರ್ಶಿ ಪ್ರಕಾಶ್, ಸದಸ್ಯ ಎ.ಆರ್ ಸುಬ್ಬಯ್ಯನಕಟ್ಟೆ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article