ಶಿಕ್ಷಣದ ಮೂಲಕ ವ್ಯಕ್ತಿತ್ವದ ನಿರ್ಮಾಣವಾಗಬೇಕು: ಫಾ. ಡಾ. ಪ್ರವೀಣ್ ಮಾರ್ಟಿಸ್
ಮಂಗಳೂರಿನ ರಾಮಕೃಷ್ಣ ಮಿಷನ್ನಲ್ಲಿ ನಡೆದ ಶ್ರದ್ಧಾ 2025-ಸ್ನಾತಕೋತ್ತರ ವಿದ್ಯಾರ್ಥಿಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಮಕೃಷ್ಣ ಮಿಷನ್ನ ಅಮೃತ ಮಹೋತ್ಸವದ ಪ್ರಯುಕ್ತ ನಾಲ್ಕು ದಿನಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮೊದಲ ದಿನದ ಶೈಕ್ಷಣಿಕ ವಿಚಾರ ಸಂಕಿರಣ, ೧೮೯೩ ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣದ ಸ್ಮರಣಾರ್ಥ ‘ಸೇವೆ-ನಿಜವಾದ ಶಿಕ್ಷಣದ ಸ್ಫೂರ್ತಿ’ ಎಂಬ ಪರಿಕಲ್ಪನೆಯಲ್ಲಿ ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಉಪಸ್ಥಿತರಿದ್ದರು.
ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಭಾ?ಣ ಹಾಗೂ ಸಂವಾದ ನಡೆಯಿತು. ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಚಾಲಕರಾದ ಸ್ವಾಮಿ ಮಹಾಮೇಧಾನಂದಜಿಯವರು ಮೊದಲ ಅವಧಿಯನ್ನು ನಡೆಸಿಕೊಟ್ಟರು. ಎರಡನೇ ಅವಧಿಯಲ್ಲಿ ಬೆಂಗಳೂರಿನ ಮನಸ್ ತರಬೇತಿ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ. ರಘೋತ್ತಮ ರಾವ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ನಂತರ ‘ಸೇವೆ, ಕೌಶಲ್ಯ, ಮೌಲ್ಯಗಳು ಮತ್ತು ಭವಿಷ್ಯದ ದೃಷ್ಟಿಕೋನದಿಂದ ಪದವಿಗಳನ್ನು ಮೀರಿದ ಶಿಕ್ಷಣ’ ಎಂಬ ವಿಷಯದ ಕುರಿತಾಗಿ ನಡೆದ ಸಂವಾದದಲ್ಲಿ ಪೂಜ್ಯ ಸ್ವಾಮಿ ಮಹಾಮೇಧಾನಂದಜಿ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಶಾಲಿನಿ ಅಯ್ಯಪ್ಪಮತ್ತು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಯತೀಶ ಕೆ.ಎಸ್. ಭಾಗವಹಿಸಿದರು.
ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕರಾದ ರಂಜನ್ ಬೆಳ್ಳರ್ಪ್ಪಾಡಿ ಸಂವಾದ ಕಾರ್ಯಕ್ರಮ ನಿರ್ವಹಿಸಿದರು.ಭಾರತೀಯ ಸೇನೆಯ ನಿವೃತ್ತ ಯೋಧ ಕ್ಯಾ. ಗಣೇಶ್ ಕಾರ್ಣಿಕ್ ಸ್ವಾಗತಿಸಿ, ಮಂಗಳ ರಿಸೋರ್ಸ್ ಮ್ಯಾನೇಜ್ಮೆಂಟ್ ಸಂಸ್ಥೆಯ ನಿರ್ದೇಶಕರಾದ ಸಚಿನ್ ಶೆಟ್ಟಿ ನಲ್ಲೂರು ವಂದಿಸಿದರು. ಅಭಿಷೇಕ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗದಿಂದ 10 ಕಾಲೇಜುಗಳ ಸುಮಾರು ೫೮೦ ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದರು.