ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ


ಮಂಗಳೂರು: ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.

ಅಪಘಾತ ತಡೆಗಟ್ಟಲು ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಯ ಕುರಿತು ನಿರಂತರವಾಗಿ ಸೂಕ್ತ ತಿಳುವಳಿಕೆಯನ್ನು ಈಗಾಗಲೇ ಘಟಕ/ವಿಭಾಗೀಯ ಮಟ್ಟದಲ್ಲಿ ನೀಡುತ್ತಾ ಬರುತ್ತಿದ್ದು ಹಾಗೂ ನಿಗಮದ ತರಬೇತಿ ಕೇಂದ್ರಗಳಲ್ಲಿಯೂ ಸಹ ತರಬೇತಿಗಳನ್ನು ನೀಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು ಪರವಾನಗಿಯನ್ನು ದುರುಪಯೋಗ ಪಡಿಸಿಕೊಂಡು ಓಡಾಡುತ್ತಿದ್ದು, ಬಸ್ಸಿನ ಪರವಾನಗಿಯನ್ನು ರದ್ದು ಮಾಡುವಂತೆ ಹಾಗೂ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ಯುವನಿಧಿ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಯುವನಿಧಿ ಬಗ್ಗೆ ಅರಿವು ಮೂಡಿಸಲು ಯುವಜನತೆಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 3,79,557 ಫಲಾನುಭವಿಗಳು ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ, ಪ್ರತಿ ತಾಲೂಕಿನಿಂದ ಸಾಕ್ಷ್ಯ ಚಿತ್ರಗಳನ್ನು ಮಾಡಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ನೇತೃತ್ವದಲ್ಲಿ ಮೈಸೂರು ಉದ್ಯೋಗ ಮೇಳದ ಪೊಸ್ಟರ್ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷಾಮ ಕೆ.ಎಸ್., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ.ಎ., ಶಾಹುಲ್ ಹಮೀದ್ ಕೆ., ಉಮಾನಾಥ್ ಶೆಟ್ಟಿ, ಬಿ. ಪದ್ಮನಾಭ ಸಾಲ್ಯಾನ್, ಸುರೇಂದ್ರ ಕಂಬಳಿ, ರಂಜಿತ್ ರೈ, ಆಲ್‌ಸ್ಟನ್ ಕ್ಲೈವ್ ಡಿಕುನ್ಹ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article