ರಕ್ತದಾನ ಮಾಡುವುದು ಅತ್ಯಂತ ಪವಿತ್ರ ಕಾರ್ಯ: ಆಂಟೋನಿ ಡಿಸೋಜಾ
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ, ಯುವ ರೆಡ್‌ಕ್ರಾಸ್ ವಿಶ್ವವಿದ್ಯಾನಿಲಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಲಯನ್ಸ್ ಕ್ಲಬ್, ಶ್ರೀ ಸಾಯಿ ಆಶ್ರಯ, ಸಾಯಿ ಶಕ್ತಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಹಾಗೂ ಭಾರತೀಯ ರೆಡ್‌ಕ್ರಾಸ್ ರಕ್ತ ನಿಧಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಬ್ಬ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಎಷ್ಟು ಬಾರಿಯಾದ್ರೂ ರಕ್ತದಾನ ಮಾಡಲು ಸಾಧ್ಯವಿದೆ. ರಕ್ತವನ್ನು ದಾನವಾಗಿ ಪಡೆದ ಕೂಡಲೇ ಸಾಕಷ್ಟು ಪರೀಕ್ಷೆಗಳಿಗೆ ಒಳಪಡಿಸಿ ಸಂಸ್ಕರಿಸಲಾಗುವುದು. ಹಾಗಾಗಿ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ರಕ್ತದಾನದ ಕುರಿತು ಜಾಗೃತಿ ಮೂಡಿಸಿದರು.
ಸಾಯಿ ಆಶ್ರಯದ ಎಸ್‌ಡಿಎಂಸಿ ವ್ಯವಸ್ಥಾಪಕ ಟ್ರಸ್ಟಿ ವಿಶ್ವಾಸ್ ರಾವ್ ಯು.ಎಸ್., ರಕ್ತದಾನ ಮಾಡಲು ಆಸಕ್ತಿ ಇದ್ದರೂ ಬಹುತೇಕ ಸಂದರ್ಭಗಳಲ್ಲಿ ಒತ್ತಡದ ಕಾರಣದಿಂದಾಗಿ ರಕ್ತದಾನ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಈ ಶಿಬಿರದ ಮೂಲಕ ಸಾಕಷ್ಟು ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್., ಈ ಕಾಲೇಜು ಕೇವಲ ವಿದ್ಯಾಭ್ಯಾಸಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಸಮಾಜಮುಖಿ ಕೆಲಸಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗದೇ ಇರುವುದರಿಂದ ಕಲಬೆರಕೆಗೆ ಅವಕಾಶವಿಲ್ಲ ಎಂದು ಅಭಿಪ್ರಾಯ ಪಟ್ಟರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ದಯಾನಂದ ನಾಯಕ್, ಸಾಯಿ ಶಕ್ತಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷೆ ಲಯನ್ ಜ್ಯೋತಿ ಚಂದ್ರ, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಿಯಾಜ್ ಎಂ.ಎ. ರಕ್ಸಿದಿ, ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್, ಎನ್‌ಎಸ್‌ಎಸ್ ಅಧಿಕಾರಿ ಭವ್ಯ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್. ಉಪಸ್ಥಿತರಿದ್ದರು.