ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು


ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಆರ್‌ಎಸ್‌ಎಸ್ ಮುಖಂಡ, ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದರು. 

ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20 ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿದೆ. ಅವರು ಹಿಂದೂ-ಮುಸ್ಲಿಮ್ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟು ಮಾಡಿದ್ದಾರೆ. ಅವರ ಭಾಷಣ ‘ಕಹಳೆ ನ್ಯೂಸ್’ ಯೂಟ್ಯೂಬ್ ಚಾನೆಲನ್‌ನಲ್ಲಿ ಪ್ರಸಾರಗೊಂಡಿದೆ ಎಂದು ದೂರುದಾರರಾದ ಈಶ್ವರಿ ಪದ್ಮುಂಜ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದೂರಿನ ಅನ್ವಯ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.25ರಂದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article