ಪ್ರಚೋದನಕಾರಿ ಭಾಷಣ ಆರೋಪ: ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್‌ಗೆ ನೋಟೀಸ್
Monday, October 27, 2025
ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ, ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅ.30 ರಂದು ವಿಚಾರಣೆಗೆ ಹಾಜರಗಲು ನೋಟೀಸ್ ಜಾರಿ ಮಾಡಲಾಗಿದೆ.
ಅ.20ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿದ್ದರು. ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 35 (3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.30 ರಂದು ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಕಲ್ಲಡ್ಕ ಇವರ ಮನೆಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದೆ.