ನ.17 ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.17 ರಂದು ಬೆಳಗ್ಗೆ 10ಕ್ಕೆ ನಗರದ ಉರ್ವಸ್ಟೋರ್ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಧ್ವಜಾರೋಹಣ ನಡೆಸುವರು. ಶಾಸಕ ವೇದವ್ಯಾಸ ಕಾಮತ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ಮಂಜುನಾಥ್ ಎಸ್.ಕೆ., ಭಾರತಿ ಜಿ. ಭಟ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್ ಎಚ್.ಎನ್. ಅತಿಥಿಯಾಗಿ ಭಾಗವಹಿಸುವವರು.
ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತದಿಂದ 1,000ಕ್ಕೂ ಹೆಚ್ಚು ಸಹಕಾರಿಗಳು ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಭಾಸ್ಕರ ದೇವಸ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಸಹಕಾರ ಸಪ್ತಾಹ ನಡೆಯಲಿದೆ. ಸಹಕಾರ ಚಳುವಳಿಗೆ ಸೌಹಾರ್ದ ಸಹಕಾರಿ ಕ್ಷೇತ್ರ ಹೊಸ ಚೈತನ್ಯವನ್ನು ನೀಡಿದೆ. ದ.ಕ. ಜಿಲ್ಲೆಯಲ್ಲಿ 137ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಸೌಹಾರ್ದ ಸಹಕಾರಿಗಳಲ್ಲಿ 92 ಇ-ಸ್ಟ್ಯಾಂಪಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ 3.8 ಲಕ್ಷಕ್ಕೂ ಹೆಚ್ಚು ಸದಸ್ಯರು ತೊಡಗಿಸಿಕೊಂಡಿದ್ದಾರೆ. 750ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. 53.71 ಕೋಟಿ ರೂ. ಪಾಲು ಬಂಡವಾಳ, 1,492 ಕೋಟಿ ರೂ. ಠೇವಣಿ, 110 ಕೋಟಿ ರೂ. ನಿಧಿಗಳು, 1,271 ಕೋಟಿ ರೂ. ಸಾಲ, 1650 ಕೋಟಿ ರೂ. ದುಡಿಯುವ ಬಂಡವಾಳ, 25 ಕೋಟಿ ರೂ. ಲಾಭದ ಹೆಗ್ಗಳಿಕೆ ಈ ಜಿಲ್ಲೆಯದ್ದಾಗಿದೆ ಎಂದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ. ಭಟ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಹರೀಶ್ ಆಚಾರ್ಯ, ಜಿಲ್ಲಾ ಸೌಹಾರ್ದ ಒಕ್ಕೂಟ ಸ್ಥಾ ಪಕಾಧ್ಯಕ್ಷ ಸುರೇಶ್ ರೈ, ನಿರ್ದೇಶಕ ಎಂ.ಎಸ್. ಗುರುರಾಜ್, ಸಿಇಒ ಚೇತನ್ ಇದ್ದರು.