ಎಫ್‌ಐಆರ್ ರದ್ದು ಕೋರಿ ತಿಮರೋಡಿ ಅರ್ಜಿ: 2 ವಾರ ಕಾಲಾವಕಾಶ
ಮಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ. ಇದೇ ವೇಳೆ, ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಸರಕಾರದ ಪರ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ತನಿಖೆಗೆ ತಡೆಯಾಜ್ಞೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶ ತೆರವಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಎರಡು ವಾರ ಮುಂದೂಡಿತಲ್ಲದೆ, ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಅಕ್ಟೋಬರ್ 24ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.