ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Friday, November 14, 2025
ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) ಅವರು ಇಂದು ನಿಧನರಾದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು.
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, 385 ಆಲದ ಮರಗಳನ್ನು ನೆಟ್ಟು ಪೋಷಿಸುವುದರೊಂದಿಗೆ ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ದೊರಕಿದೆ.