ಧರ್ಮಸ್ಥಳ ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭ: ಜ್ಞಾನ, ವಿಜ್ಞಾನ, ಸುಜ್ಞಾನದ ಅಪೂರ್ವ ಮಾಹಿತಿಯ ಕಣಜ ವಸ್ತುಪ್ರದರ್ಶನ
Saturday, November 15, 2025
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜ ವಸ್ತುಪ್ರದರ್ಶನ ಉದ್ಘಾಟಿಸಿ ಶುಭ ಹಾರೈಸಿದರು.
ಪುಸ್ತಕ ಮಳಿಗೆಗಳು, ಆರೋಗ್ಯ, ಶಿಕ್ಷಣ, ಕೃಷಿ, ವಾಣಿಜ್ಯ, ಜೀವವಿಮೆ, ಸರ್ಕಾರದ ವಿವಿಧ ಇಲಾಖಾ ಮಳಿಗೆಗಳು, ಅಂಚೆ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಗ್ರಾಮೀಣ ಕರಕುಶಲ ಕೈಗಾರಿಕೆಗಳು, ವಸ್ತ್ರ ಮಳಿಗೆಗಳು, ಆಯುರ್ವೇದ ಔಷಧಿ ಮಳಿಗೆಗಳು, ಪೂಜಾ ಸಾಮಾಗ್ರಿಗಳು, ಸಿರಿಧಾನ್ಯಗಳು, ಅಡಿಕೆ ಹಾಳೆತಟ್ಟೆ ತಯಾರಿ, ಸೇರಿದಂತೆ 350ಕ್ಕೂ ಮಿಕ್ಕಿ ಮಳಿಗೆಗಳಿದ್ದು ಪ್ರೇಕ್ಷಕರ ಕಣ್ಮನ ಸೆಳೆಯುತ್ತವೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಎಲ್ಲಾ ಮಳಿಗೆಗಳಿಗೂ ಭೇಟಿ ನೀಡಿ ಶುಭ ಹಾರೈಸಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಇಒ ಜನಾರ್ದನ ಕೆ.ಎನ್., ಎಸ್‌ಡಿಎಂ ಕಾಲೇಜಿನ ಡಾ. ಶ್ರೀಧರ ಭಟ್, ಪಿ. ಜಿನರಾಜ ಆರಿಗ, ವಗ್ಗ ಮತ್ತಿತರರು ಉಪಸ್ಥಿತರಿದ್ದರು.
ನ.20ರ ವರೆಗೆ ಪ್ರತಿ ದಿನ ಬೆಳಗ್ಗೆ ಒಂಭತ್ತು ಗಂಟೆಯಿಂದ ರಾತ್ರಿ ಹತ್ತು ಗಂಟೆ ವರೆಗೆ ವಸ್ತುಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ.
ವಸ್ತುಪ್ರದರ್ಶನ ವೇದಿಕೆಯಲ್ಲಿ ಪ್ರತಿದಿನ ಸಂಜೆ ಆರು ಗಂಟೆಯಿಂದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

