ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕ: ಸಚಿವರ ಭರವಸೆ
ಕುಂದಾಪುರ: ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬುಧವಾರ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಕುಂದಾಪುರ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆ ಮಂಜೂರು ಮಾಡಲಾಗಿತ್ತು. ಆದರೆ, 2015ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು ಅದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಶಾಸಕ ಕಿರಣ್ ಕುಮಾರ್ ಹೇಳಿದರು.
ಖಾಯಂ ವೈದ್ಯರ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮುಂದಿನ ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಸಚಿವ ಲಾಡ್ ಹೇಳಿದರು.
ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಆ ಎರಡೂ ಆಸ್ಪತ್ರೆಗಳನ್ನು ಸೇರಿಸಲಾಗುವುದು ಎಂದರು.