ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗಬಾರದು: ರವಿಚಂದ್ರ ನಾಯಕ್
ಮಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಡಿಸೆಂಬರ್ 21 ರಂದು ಪ್ರಾರಂಭವಾಗಲಿದ್ದು, ಜಿಲ್ಲೆಯ 0-5 ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಮುತುವರ್ಜಿ ವಹಿಸಿ ಲಸಿಕೆ ಹಾಕಿಸಲು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದ್ದಾರೆ.
ಅವರು ಮಹಾನಗರಪಾಲಿಕೆ ಮಂಗಳ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿದಾಗ ಪೋಲಿಯೋ ರೋಗ ನಿಯಂತ್ರಣ ಸಾಧ್ಯವಾಗುತ್ತದೆ. ಆದ್ದರಿಂದ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.
ಲಸಿಕಾ ಕಾರ್ಯಕ್ರಮ ಆಯೋಜನೆಯ ಬಗ್ಗೆ ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಚಾಲನಾ ಸಮಿತಿ ಸಭೆಯನ್ನು ನಡೆಸಿ ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು. ವಲಸೆ ಮಕ್ಕಳು, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಕಾರ್ಖಾನೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ, ಅವರಿಗೆ ಆದ್ಯತೆ ನೀಡಿ ಲಸಿಕೆ ಹಾಕಿಸಲು ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.
ಸಾರ್ವಜಿನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪಲ್ಸ್ ಪೋಲಿಯೋ ಟ್ರಾನ್ಸಿಟ್ ಬೂತ್ಗಳನ್ನು ತೆರೆಯಲಾಗಿದೆ ಹಾಗೂ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಲಸಿಕಾ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಕಾರ್ಮಿಕರಿಗೆ ಡೆಂಗ್ಯೂ ಮತ್ತು ಮಲೇರಿಯಾದ ಬಗ್ಗೆ ಮಾಹಿತಿ ಕೊರತೆ ಇರುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಮಿಕರಿಗೆ ಡೆಂಗ್ಯೂ ಮತ್ತು ಮಲೇರಿಯಾದ ಕುರಿತು ತಿಳುವಳಿಕೆ ನೀಡಿ, ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖಾಧಿಕಾರಿಗಳು ಇದ್ದರು.