ಇಂದಿನಿಂದ ಎಸ್‌ಡಿಪಿಐ ಪ್ರತಿನಿಧಿ ಮಂಡಳಿ ಸಭೆ
ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ ಜ.20 ಮತ್ತು 21ರಂದು ನಗರದ ಎಕ್ಕೂರು ಬಳಿಯ ಇಂಡಿಯಾನಾ ಸಭಾಂಗಣದಲ್ಲಿ ನಡೆಯಲಿದೆ.
ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ನೂತನ ರಾಷ್ಟ್ರೀಯ ಪ್ರತಿನಿಧಿಗಳ ಆಯ್ಕೆ ನಡೆಯಲಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಕಾರ್ಯಕಾರಿ ಸಮಿತಿ ಮತ್ತು ಪದಾಧಿಕಾರಿಗಳ ಘೋಷಣೆಯಾಗಲಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.21ರಂದು ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ನಾಯಕರಿಗೆ ಅಭಿನಂದನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 4.30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಪುರಭವನವರೆಗೆ ರ‍್ಯಾಲಿ ನಡೆಯಲಿದ್ದು, ಸಂಜೆ 6.30ಕ್ಕೆ ಪುರಭವನದಲ್ಲಿ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.
ಪಕ್ಷದ ರಾಜ್ಯ ಉಪಾಧ್ಯಕ್ಷೆ ಶಾಹಿದ ತಸ್ನೀಮ್, ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಉಪಸ್ಥಿತರಿದ್ದರು.