ಸಿದ್ದರಾಮಯ್ಯ ಅವರ 17ನೇ ದಾಖಲೆಯ ಬಜಟ್ ನಲ್ಲಿ ದಾಖಲೆ ಅಭಿವೃದ್ಧಿ ಕಾರ್ಯಕ್ರಮ: ಕೆ.ಹರೀಶ್ ಕುಮಾರ್
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದಾಖಲೆಯ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ.
ಕರಾವಳಿ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸಿರುವುದು ಜಾಗತಿಕ ಮಟ್ಟದಲ್ಲಿ ಮಂಗಳೂರನ್ನು ಪ್ರವಾಸಿ ತಾಣವಾಗಿ ಗುರುತಿಸಲು ಸಹಕಾರಿಯಾಗಲಿದೆ. ಮಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತರಬೇತಿಗಳಿಗೆ ಆದ್ಯತೆ ನೀಡಿರುವುದು ಯುವಜನತೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಹಾಕಲಿದೆ. ಕರಾವಳಿಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪನೆ, ಮೀನು ಮಾರುಕಟ್ಟೆ ನಿರ್ಮಾಣ, ಬಂದರುಗಳು ಮತ್ತು ಸರಕು ಸಾಗಣೆ ವಲಯದ ಅಭಿವೃದ್ಧಿಗಾಗಿ ‘ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ’, ಅಡಿಕೆ-ತೆಂಗು ರೋಗ ನಿಯಂತ್ರಣಕ್ಕ ಒತ್ತು ನೀಡಿದೆ. ಇದು ಜಿಲ್ಲೆಯ ಉದ್ಯಮ, ಶಿಕ್ಷಣ ಮತ್ತು ಪ್ರವಾಸೋದ್ಯಮದ ಮೇಲೆ ಸಕಾರಾತ್ಮಕ ಪ್ರಭಾವ ಬೀರಲಿದೆ ಎಂದು ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.