ಸಹಕಾರಿ ಸಂಘದಲ್ಲಿ ಮಹಿಳೆಗೆ ಜಾತಿ ನಿಂದನೆ: ದೂರು ದಾಖಲು
ಬಂಟ್ವಾಳ: ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಾಣಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆ:
ನೆಟ್ಲಮುಡ್ನೂರು ಗ್ರಾಮದ ನೆಕ್ಕರೆಮಠ ನಿವಾಸಿ, ಪರಿಶಿಷ್ಟ ಜಾತಿಯ ಶೇಷಮ್ಮ (47) ಎಂಬವರು ೨೪ ವರ್ಷಗಳಿಂದ ನೆಟ್ಲಮುಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶಾಖೆಯಲ್ಲಿ ಸಮೂಹ ಕಾಯಕ (ಸೇವಕಿ) ಕೆಲಸ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಅವರ ವಿರುದ್ಧ ದ್ವೇಷಪೂರಿತವಾಗಿ ನಡೆದುಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.
ದೂರಿನಲ್ಲಿ ಉಲ್ಲೇಖಿಸಲಾದ ಅಂಶಗಳ ಪ್ರಕಾರ ಮಾರ್ಚ್ 29, ರಂದು ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಎಂಬಾತ ಶೇಷಮ್ಮ ಅವರಿಗೆ ಕರೆ ಮಾಡಿ, ಜಾತಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಎ.1 ರಂದು ಶೇಷಮ್ಮ ಅವರು ಕೆಲಸಕ್ಕೆ ಹೋದಾಗ ಯಾವುದೇ ಮುನ್ಸೂಚನೆ ನೀಡದೆ ಅವರನ್ನು ಕೆಲಸದಿಂದ ಅಮಾನತು ಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಎ.4 ರಂದು ಅವರು ಕಚೇರಿಗೆ ಹೋದಾಗ ಶಾಖಾ ವ್ಯವಸ್ಥಾಪಕ ಯತೀಶ್ ಗೌಡ ಅವರು “ನೀನು ನಲಿಕೆ ಕೆಳಜಾತಿಯವಳು, ನಿನಗೆ ಇಲ್ಲಿ ಕೆಲಸ ಇಲ್ಲ” ಎಂದು ಹೇಳಿ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಘಟನೆಗಳಿಂದ ಮನನೊಂದ ಶೇಷಮ್ಮ ಅವರು ಮಾನಸಿಕವಾಗಿ ಜರ್ಜರಿತರಾಗಿ, ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ತಮಗೆ ನ್ಯಾಯ ಒದಗಿಸಬೇಕೆಂದು ಕೋರಿ ಎ.11 ರಂದು ಪೊಲೀಸರ ಮೊರೆ ಹೋಗಿದ್ದಾರೆ.
ಶೇಷಮ್ಮ ಅವರು ನೀಡಿದ ದೂರಿನ ಪ್ರಕಾರ, ಆರೋಪಿಗಳು ಕಚೇರಿಯ ಕೆಲಸದ ವಿಚಾರದಲ್ಲಿ ತಾರತಮ್ಯ ಎಸಗಿದ್ದಲ್ಲದೆ, ಇತರ ಸಿಬ್ಬಂದಿಗಳ ಮುಂದೆ ದೂರುದಾರ ಮಳೆಯ ಜಾತಿಯನ್ನು ಎತ್ತಿ ಹಿಡಿದು ಅವಮಾನಿಸಿದ್ದಾರೆ. ಅಲ್ಲದೆ, ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾ ಗಿದೆ. ಇದರಿಂದ ಮನನೊಂದ ಶೇಷಮ್ಮ ಅವರು ವಿಟ್ಲ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ನೆರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಶೋದಾ ಮತ್ತು ಶಾಖಾ ವ್ಯವಸ್ಥಾಪಕ ಯತೀಶ್ ಡಿ. ಗೌಡ ಎಂಬವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 74, 49 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಸ್ತುತ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಅವರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಪ್ರಸ್ತುತ ಪೊಲೀಸರು ಘಟನಾ ಸ್ಥಳದ ಮಹಜರು ನಡೆಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.