ಮಹಿಳೆಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಪ್ರಕರಣ: ಸಹಕಾರಿ ಸಂಘದ ಕಚೇರಿ ಮುಂಭಾಗ ಪ್ರತಿಭಟನೆ

ಮಹಿಳೆಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಪ್ರಕರಣ: ಸಹಕಾರಿ ಸಂಘದ ಕಚೇರಿ ಮುಂಭಾಗ ಪ್ರತಿಭಟನೆ


ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಕರಣ ದಾಖಲಾಗಿದ್ದು, ಇದೀಗ ದಲಿತ ಸಂಘಟನೆಗಳ ನೇತೃತ್ವದಲ್ಲಿ ನೇರಳಕಟ್ಟೆ ಸಹಕಾರಿ ಸಂಘದ ಕಚೇರಿಯ ಮುಂಭಾಗದಲ್ಲಿ ಸಂತ್ರಸ್ತ ಮಹಿಳೆಯ ಪರವಾಗಿ ಪ್ರತಿಭಟನೆ ನಡೆಸಿದೆ.

ನೇರಳಕಟ್ಟೆ ಸಹಕಾರಿ ಸಂಘದಲ್ಲಿ ಸುಮಾರು ಎರಡು ದಶಕಗಳಿಂದ ಕ್ಲರ್ಕ್ ಕೆಲಸ ಮಾಡುತ್ತಿದ್ದ ಸೇಸಮ್ಮ ಎಂಬ ಮಹಿಳೆಯ ಮೇಲೆ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಮತ್ತು ಪ್ರಭಾರ ಮ್ಯಾನೇಜರ್ ಯತೀಶ್ ಗೌಡ ಅವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಜೊತೆಗೆ ಸೇಸಮ್ಮ ಅವರಿಗೆ ಕೆಲಸಕ್ಕೆ ಬರದಂತೆ ಸೂಚಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಸಲಾಗಿದೆ.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಮುಖ್ಯಸ್ಥರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ಅವರು ಮಾತನಾಡಿ, ಕೋರ್ಟ್ ಆದೇಶದ ಬಗ್ಗೆ ನಮಗೆ ಗೌರವವಿದೆ, ಆದರೆ ತನಿಖೆಗೆ ತಡೆ ನೀಡಬಾರದು. 24 ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ಮಹಿಳೆಗೆ ಅನ್ಯಾಯವಾಗಿದೆ. ಮೇಲಾಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಸೇಸಮ್ಮ ಅವರಿಗೆ ಮೌಖಿಕವಾಗಿ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಿದ ಮೇಲೆಯೂ ಅವರಿಗೆ ಕೆಲಸ ಮಾಡಲು ಅವಕಾಶ ನೀಡದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ನೊಂದ ಮಹಿಳೆಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶವನ್ನು ನೀಡಬೇಕು ಎಂದು ಆಗ್ರಹಿಸಿದರು. ದೂರು ತಡೆಯಾಜ್ಞೆಯ ಬಗ್ಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article