ತುಳುನಾಡಿನ ಸಾಂಸ್ಕೃತಿಕ ಪರಂಪರೆ ಶ್ರೇಷ್ಠ: ಪದ್ಮರಾಜ್

ತುಳುನಾಡಿನ ಸಾಂಸ್ಕೃತಿಕ ಪರಂಪರೆ ಶ್ರೇಷ್ಠ: ಪದ್ಮರಾಜ್


ಮಂಗಳೂರು: ತುಳುನಾಡಿನ ಸಾಂಸ್ಕೃತಿಕ ಪರಂಪರೆ ವಿಶೇಷವಾಗಿರುವಂತಹದು, ದೈವರಾಧನೆ, ಯಕ್ಷಗಾನ, ಕಂಬಳ ಮೊದಲಾದವುಗಳು ತುಳುನಾಡಿನ ಸಂಸ್ಕೃತಿಯ ಹಿರಿಮೆಯಾಗಿದೆ. ಯುವ ಜನರಿಗೆ ತುಳುನಾಡಿನ ಇತಿಹಾಸ, ಸಂಸ್ಕೃತಿಯ ಕುರಿತು ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ‘ತುಳು ಇತಿಹಾಸ ಮತ್ತು ಸಂಸ್ಕೃತಿ’ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ  ಮಹಾತ್ಮ ಗಾಂಧೀಜಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂಗಳೂರು ಭೇಟಿಯು ತುಳುನಾಡಿನ ಚರಿತ್ರೆಯಲ್ಲಿ ಐತಿಹಾಸಿಕ ಮಹತ್ವವಾದದ್ದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲೇಖಕ ಹಾಗೂ ಅಧ್ಯಾಪಕ ಅರವಿಂದ ಚೊಕ್ಕಾಡಿ ಅವರು 1837ರಲ್ಲಿ ಬ್ರಿಟಿಷರ ವಿರುದ್ಧ ನಡೆದ ಅಮರ ಸುಳ್ಯ ಹೋರಾಟದ ಬಗ್ಗೆ ಮಾತನಾಡಿ,  ಎಲ್ಲಾ ಸಮುದಾಯದ ಜನರ ಒಗ್ಗೂಡಿಕೆಯಿಂದ ತುಳುನಾಡಿನವರು ಹಾಗೂ ಕೊಡಗಿನವರು ಒಗ್ಗಟ್ಟಿನಿಂದ ಹೋರಾಟ ಸಂಘಟಿಸಿದ್ದರು ಎಂದು ಹೇಳಿದರು.

ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತುಳು ಸಂಸ್ಕೃತಿ ಬಗ್ಗೆ ಉಪನ್ಯಾಸ ನೀಡಿದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯ ಪಾಂಗಾಳ ಬಾಬು ಕೊರಗ, ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷ ಡಾ. ಬಿ.ಜೆ. ಸುವರ್ಣ ಮತ್ತು ಶೇಖರ್ ಪೂಜಾರಿ, ಕಾಲೇಜು ಆಡಳಿತ ಮಂಡಳಿ ಸದಸ್ಯ ಚಂದನ್ ದಾಸ್, ಆಡಳಿತ ಅಧಿಕಾರಿ ನಾಗೇಶ್ ಕರ್ಕೇರಾ, ಡಾ. ಯತೀನ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಘುರಾಜ್ ಕದ್ರಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಸ್ವಾಗತಿಸಿದರು. ಉಪನ್ಯಾಸಕ ಪ್ರತೀಪ್ ಉಪಾಧ್ಯಾಯ, ವಿದ್ಯಾರ್ಥಿನಿ ಮಂಗಳಾ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ರವಿಕಲಾ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article