ಕರಾವಳಿಗೆ ಸುರಕ್ಷಿತ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ನೀತಿ ರೂಪಿಸಲು ಎಎಪಿ ಒತ್ತಾಯ

ಕರಾವಳಿಗೆ ಸುರಕ್ಷಿತ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ನೀತಿ ರೂಪಿಸಲು ಎಎಪಿ ಒತ್ತಾಯ

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಸುಸ್ಥಿರ, ಸುರಕ್ಷಿತ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ನೀತಿಯನ್ನು ತುರ್ತಾಗಿ ರೂಪಿಸಿ ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಘಟಕವು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಳೆದ ಜ. 10ರಂದು ಮಂಗಳೂರಿನಲ್ಲಿ ಹೂಡಿಕೆದಾರರ ಸಭೆಯಲ್ಲಿ ಭಾಗವಹಿಸಿ, ಕರಾವಳಿ ಕರ್ನಾಟಕಕ್ಕಾಗಿ ಹೊಸ ಪ್ರವಾಸೋದ್ಯಮ ನೀತಿಯನ್ನು ರೂಪಿಸುವುದಾಗಿ ಹಾಗೂ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ಭರವಸೆ ನೀಡಿದ್ದರು. ಐಟಿ ಮತ್ತು ಇತರ ಕೈಗಾರಿಕೆಗಳಿಗೆ ಅಗತ್ಯವಾದ ಬೃಹತ್ ಮೂಲಸೌಕರ್ಯವನ್ನು ಒದಗಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೆ ಪ್ರವಾಸೋದ್ಯಮ ನೀತಿಯ ಯಾವುದೇ ಕರಡು ವಿಧಾನಸಭೆಯಲ್ಲಿ ಪ್ರಸ್ತಾಪವಾಗಿಲ್ಲ ಎಂಬುದು ವಿಷಾದನೀಯ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಉಪಮುಖ್ಯಮಂತ್ರಿ ಅವರ ಪ್ರಕಾರ ಪ್ರವಾಸೋದ್ಯಮ ಕ್ಷೇತ್ರವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆದರೆ ವಾಸ್ತವದಲ್ಲಿ ಇದು ರಿಯಲ್ ಎಸ್ಟೇಟ್ ಲಾಬಿಗಳಿಗೆ ಪರೋಕ್ಷವಾಗಿ ಉತ್ತೇಜನ ನೀಡುತ್ತಿರುವುದಾಗಿ ಕಾಣುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಕಾಂಡ್ಲಾ ಪ್ರದೇಶಗಳು ಮತ್ತು ಹಸಿರು ಹೊದಿಕೆ ದೊಡ್ಡ ಪ್ರಮಾಣದಲ್ಲಿ ನಾಶವಾಗುತ್ತಿರುವುದು ಕಳವಳಕಾರಿ. ಮೀನು ಸಂಸ್ಕರಣಾ ಘಟಕಗಳಿಂದ ರಾಸಾಯನಿಕಯುಕ್ತ ತ್ಯಾಜ್ಯ ನೀರನ್ನು ಸಮುದ್ರಕ್ಕೆ ನೇರವಾಗಿ ಬಿಡಲಾಗುತ್ತಿದೆ. ಸಿಆರ್‌ಝಡ್ ನಿಯಮಗಳ ಉಲ್ಲಂಘನೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸರವಾದಿಗಳು ಮತ್ತು ಪ್ರಕೃತಿ ಪ್ರೇಮಿಗಳು ತೀವ್ರ ಚಿಂತೆ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳೀಯ ಪುರಸಭೆಗಳು ಮತ್ತು ಪಂಚಾಯತ್‌ಗಳು ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಇದು ಪ್ರವಾಸೋದ್ಯಮದ ಬೆಳವಣಿಗೆಗೆ ಗಂಭೀರ ಧಕ್ಕೆಯಾಗಿದೆ ಎಂದು ಅವರು ಹೇಳಿದರು.

ಹೋಂಸ್ಟೇಗಳಿಗೆ ಪರವಾನಗಿ ನೀಡುವಲ್ಲಿ ಮತ್ತು ಅವುಗಳ ನವೀಕರಣ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬವು ಸ್ಥಳೀಯ ಉದ್ಯಮಿಗಳಿಗೆ ತೊಂದರೆಯನ್ನು ಉಂಟುಮಾಡುತ್ತಿದೆ. ಈ ಸಮಸ್ಯೆಯನ್ನು ಜಿಲ್ಲಾಡಳಿತ ತ್ವರಿತವಾಗಿ ಮತ್ತು ಸಕಾರಾತ್ಮಕವಾಗಿ ಪರಿಹರಿಸಬೇಕಾಗಿದೆ ಎಂದರು.

ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಲ್. ಪಿಂಟೊ, ಪ್ರಮುಖರಾದ ಸುಜಾತ ಸತೀಶ್, ವಾಸುದೇವ್, ಶಾಲೆಟ್ ಪಿಂಟೊ, ಕಬೀರ್ ಕಾಟಿಪಳ್ಳ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article