ಕೌಶಲ್ಯಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಜಿಲ್ಲಾ, ಕೌಶಲ್ಯ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವರದಿಯನ್ನು ಜಿಲ್ಲಾಧಿಕಾರಿ ದರ್ಶನ ಹೆಚ್.ವಿ ಇವರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯ ಮಿಷನ್ ಸಭೆಯಲ್ಲಿ ಮಂಡಿಸಲಾಯಿತು.
ಯೋಜನಾ ವರದಿಯ ನೋಡೆಲ್ ಅಧಿಕಾರಿ ಹರೀಶ್ ಸಿ.ಪಿ ಅವರು ಯೋಜನಾ ವರದಿಯನ್ನು ಸಭೆಗೆ ಮಂಡಿಸಿದರು.
ವರದಿಯನ್ನು ಜಿಲ್ಲೆಯ ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು ವಿವಿಧ ಸರ್ಕಾರಿ ಇಲಾಖೆಗಳು, ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ದತ್ತಾಂಶವನ್ನು ಕ್ರೋಢೀಕರಿಸಿ ಸಿದ್ಧಪಡಿಸಲಾಗಿದ್ದು ಜಿಲ್ಲೆಯ ಕೈಗಾರಿಕೆಗಳಿಗೆ ಭವಿಷ್ಯದಲ್ಲಿ ಬೇಕಿರುವ ಕೌಶಲ್ಯಗಳ ಬೇಡಿಕೆ ಮತ್ತು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಂದ ಪೂರೈಕೆ ಸರಪಳಿ ಕುರಿತು ಅಧ್ಯಯನ ಕೈಗೊಂಡು ವಿದ್ಯಾರ್ಥಿಗಳಿಗೆ ಪದವಿಯ ಅಂತಿಮ ಹಂತದಲ್ಲಿ ತಾವು ಓದುತ್ತಿರುವ ಸಂಸ್ಥೆಗಳ ಪ್ಲೇಸ್ಮೆಂಟ್ ಘಟಕಗಳ ಮೂಲಕ ವಿವಿಧ ಕಂಪನಿಗಳಿಗೆ ಆಯ್ಕೆಗೊಂಡ ಶೇಕಡಾವಾರು ಅಂಕಿ-ಅಂಶಗಳು ಮತ್ತು ಸರಾಸರಿ ಸಂಬಳ ಮತ್ತು, ವಿದ್ಯಾರ್ಥಿಗಳು ಬಯಸುವ ಅನೂಕೂಲತೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಮ್ಮಿಕೊಂಡಿರುವ ಕೌಶಲ್ಯಾಭಿವೃದ್ಧಿ ಯೋಜನೆಗಳು ಮತ್ತು ಫಲಾನುಭವಿಗಳ ಬಗೆಗೆ ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಮಾತನಾಡಿ, ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಪಡೆದು ಹೊರ ಬರುತ್ತಿರುವ ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಕೌಶಲ್ಯದ ಕೊರತೆ ಮತ್ತು ಅದರ ಹಿಂದಿನ ಕಾರಣಗಳ ಬಗ್ಗೆ ಪರಾಮರ್ಶೆ ನಡೆಸಿ ಕೌಶಲ್ಯ ಹೆಚ್ಚಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾರಿಗೊಳಿಸಲಾದ ವಿವಿಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕ್ರಮವಹಿಸಲು ನಿರ್ದೇಶನ ನೀಡಿದರು. ಅಲ್ಲದೇ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಿಪುಣ ಯೋಜನೆಯ ಬಗ್ಗೆ ಕೈಗಾರಿಕೆಗಳ ಸಹಭಾಗಿತ್ವದಲ್ಲಿ ನೈಪುಣ್ಯತೆ ಮತ್ತು ಕೌಶಲ್ಯತೆ ಹೆಚ್ಚಿಸಲು ವಿಫುಲ ಅವಕಾಶಗಳಿದ್ದು, ಈ ಬಗ್ಗೆ ಜಿಲ್ಲೆಯ ಕೈಗಾರಿಕೆಗಳು ಪಾಲುದಾರಿಕೆ ಹೊಂದಲು ಹೆಚ್ಚಿನ ಮಟ್ಟದ ಪ್ರಚಾರ ನೀಡಲು ಮತ್ತು ಕೈಗಾರಿಕಾ ಸಂಘಗಳ ಪ್ರತಿನಿಧಿಗಳನ್ನೊಳಗೊಂಡ ತಂಡ ರಚಿಸಲು ಮಾರ್ಗದರ್ಶನ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ. ಜಯರಾಂ, ಕೆ.ಸಿ.ಸಿ.ಐ.ಯ ಅಧ್ಯಕ್ಷ ಪಿ.ಬಿ. ಅಹ್ಮದ್ ಮುದಾಸರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.