ಮೂಡುಬಿದಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

ಮೂಡುಬಿದಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ


ಮೂಡುಬಿದಿರೆ: ಕನ್ನಡದ ಅಭಿವೃದ್ದಿಗೆ ಮಹತ್ತರ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಆಶ್ರಯದಲ್ಲಿ ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನಲ್ಲಿ ನಡೆಯಿತು.

ಪ್ರಾಧ್ಯಾಪಕ ರಾಮಪ್ರಸಾದ ಕಾಂಚೋಡು ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ, ಕನ್ನಡದ ಕಟ್ಟಾಳುಗಳ ಬೆವರಿನ ಫಲವೇ ಕನ್ನಡ ಸಾಹಿತ್ಯ ಪರಿಷತ್ತು. ಅದರ ಹುಟ್ಟುಹಬ್ಬವನ್ನು ಆಚರಿಸುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ. ಇಂದಿನ ಕನ್ನಡದ ವೈಭವದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಕೈಗೊಂಡ ಅನೇಕ ಕಾರ್ಯಗಳಿವೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಅದರ ಸೇವೆಗಳು ಮತ್ತು ಸಾಧನೆಗಳನ್ನು ಸ್ಮರಿಸಲಾಯಿತು.

ಕನ್ನಡ ಭಾಷೆಯ ಅಭಿವೃದ್ಧಿಗೆ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತೀರುವ ಸಾಹಿತ್ಯ ಪರಿಷತ್ತು, ಗ್ರಂಥ ಪ್ರಕಾಶನ, ಸಂಶೋಧನೆ, ಸಾಹಿತ್ಯ ಸಮ್ಮೇಳನಗಳು ಹಾಗೂ ಸಂಸ್ಕೃತಿ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದೆ. ಮಹಾಕಾವ್ಯಗಳು, ಶಾಸನಗಳು ಮತ್ತು ಮೌಖಿಕ ಸಾಹಿತ್ಯವನ್ನು ಸಂಗ್ರಹಿಸಿ ಗ್ರಂಥರೂಪದಲ್ಲಿ ಉಳಿಸುವ ಮೂಲಕ ಕನ್ನಡದ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ಪರಿಚಯಿಸುವ ಕಾರ್ಯವನ್ನು ಇದು ನಿರಂತರವಾಗಿ ಮಾಡುತ್ತಿದೆ ಎಂದರು.

ಇಂದಿನ ಡಿಜಿಟಲ್ ಯುಗದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವುದು, ಆಂಗ್ಲಮಾಧ್ಯಮ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಬೆಳೆಸುವುದು ಹಾಗೂ ತಂತ್ರಜ್ಞಾನವನ್ನು ಅರ್ಥಪೂರ್ಣವಾಗಿ ಬಳಸಿಕೊಂಡು ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ಕರೆ ನೀಡಿದರು.

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಶೆಟ್ಟಿ ಪ್ರಾರ್ಥಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article