ಉಪಚುನಾವಣೆಯಲ್ಲಿ ರಾಜ್ಯ ಸರಕಾರದ ಆಡಳಿತ ಯಂತ್ರ ಸಂಪೂರ್ಣ ಬಳಕೆ: ಬಿ.ವೈ. ವಿಜಯೇಂದ್ರ

ಉಪಚುನಾವಣೆಯಲ್ಲಿ ರಾಜ್ಯ ಸರಕಾರದ ಆಡಳಿತ ಯಂತ್ರ ಸಂಪೂರ್ಣ ಬಳಕೆ: ಬಿ.ವೈ. ವಿಜಯೇಂದ್ರ


ಸುಬ್ರಹ್ಮಣ್ಯ: ಉಪಚುನಾವಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಆಡಳಿತ ಯಂತ್ರವನ್ನು ಬಳಸಿಕೊಂಡಿದೆ. ಜನವಿರೋಧಿ, ಬಡವರ ವಿರೋಧಿ ಹಾಗೂ ದಲಿತ ವಿರೋಧಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುಬ್ರಹ್ಮಣ್ಯದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಗೆಲುವುಗಳು ಸಂಘಟನೆಯ ಶಕ್ತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲಿನ ಜನರ ವಿಶ್ವಾಸದ ಪ್ರತಿಫಲವಾಗಿವೆ ಎಂದ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದು ಪಕ್ಷದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಪಶ್ಚಿಮ ಬಂಗಾಳದ ಜನತೆಯ ತೀರ್ಪು ಹಿಂದೂವಿರೋಧಿ ನೀತಿಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದಂತಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯಿಂದ ಜನರು ನಿರ್ಣಾಯಕ ತೀರ್ಪು ನೀಡಿದ್ದಾರೆ. ಅಸ್ಸಾಂ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದಿರುವುದು ಆಡಳಿತದ ಜನಪರತೆ ಮತ್ತು ಅಭಿವೃದ್ಧಿ ಕಾರ್ಯಗಳ ಫಲವಾಗಿದೆ ಎಂದು ಅವರು ಹೇಳಿದ ಅವರು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದೊರೆತ ಯಶಸ್ಸು ಕಾರ್ಯಕರ್ತರ ಪರಿಶ್ರಮ ಮತ್ತು ಜನಬೆಂಬಲದಿಂದ ಸಾಧ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪಶ್ಚಿಮ ಏಷ್ಯಾ ಯುದ್ಧ ಹಾಗೂ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಿತವ್ಯಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ ನೀಡಿರುವ ಸಲಹೆಯನ್ನು ಕಾಂಗ್ರೆಸ್ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ಕಾಂಗ್ರೆಸ್ ಅನಗತ್ಯ ರಾಜಕೀಯ ಟೀಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಷ್ಟ್ರಹಿತದ ವಿಚಾರಗಳಲ್ಲಿ ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಇತ್ತೀಚಿನ ಉಪಚುನಾವಣೆ ಫಲಿತಾಂಶಗಳ ಕುರಿತು ಮಾತನಾಡಿದ ಅವರು, ಹಿಂದೆ ಆಡಳಿತ ಪಕ್ಷಗಳು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದರೂ ನಂತರದ ಸಾರ್ವತ್ರಿಕ ಚುನಾವಣೆಯಲ್ಲಿ ಸರ್ಕಾರವೇ ಪತನವಾದ ಉದಾಹರಣೆಗಳಿವೆ ಎಂದು ಹೇಳಿದ ಅವರು ಹಿಂದಿನ ಸಿದ್ದರಾಮಯ್ಯ ಸರ್ಕಾರವೇ ಅದಕ್ಕೆ ಉದಾಹರಣೆ. ಹೀಗಾಗಿ ಈ ಫಲಿತಾಂಶವನ್ನು ಮುಂದಿನ ಚುನಾವಣೆಯ ಮಾನದಂಡವಾಗಿ ಪರಿಗಣಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಸುಬ್ರಹ್ಮಣ್ಯ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ರಾಜೇಶ್ ಎನ್.ಎಸ್., ಪ್ರಸನ್ನ ದರ್ಬೆ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article