ಕುಕ್ಕೆ ಶ್ರೀ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ
Tuesday, May 12, 2026
ಸುಬ್ರಹ್ಮಣ್ಯ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಪತ್ನಿ ಹಾಗೂ ಮಕ್ಕಳೊಂದಿಗೆ ಆಗಮಿಸಿದ ವಿಜಯೇಂದ್ರ ಅವರು ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಮಠದ ಗುರುಗಳಾದ ಶ್ರೀ ವಿದ್ಯಾ ಪ್ರಸನ್ನತೀರ್ಥ ಶ್ರೀಪಾದರು ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಮಠದ ವತಿಯಿಂದ ವಿಜಯೇಂದ್ರ ಕುಟುಂಬಕ್ಕೆ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಸ್ಥಾನ ಮತ್ತು ಮಠದ ಆವರಣದಲ್ಲಿ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ರಾಜಕೀಯ ಕಾರ್ಯಭಾರದ ನಡುವೆಯೂ ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಆಗಮಿಸಿದ ವಿಜಯೇಂದ್ರ ಅವರ ಭೇಟಿ ಭಕ್ತರಲ್ಲಿ ವಿಶೇಷ ಗಮನ ಸೆಳೆಯಿತು.
ದೇವಸ್ಥಾನದ ಅಧಿಕಾರಿಗಳು, ಮಠದ ಭಕ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
