ಕಳಪೆ ಕಾಮಗಾರಿ ಆರೋಪ
ಉಳ್ಳಾಲ: ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಪಾನೇಲ ಪ್ರದೇಶದಲ್ಲಿ ನಡೆಯುತ್ತಿರುವ ಬಹುಗ್ರಾಮ ನೀರು ಜಲ ಸಮೃದ್ಧಿ ಯೋಜನೆಯ ಕಾಮಗಾರಿಯಲ್ಲಿ ಭಾರೀ ಅವ್ಯವಸ್ಥೆ ಹಾಗೂ ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಗ್ರಾಮಸ್ಥರಿಂದ ಕೇಳಿಬಂದಿವೆ.
ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಈ ಮಹತ್ವದ ಯೋಜನೆಯಲ್ಲಿ ಗುಣಮಟ್ಟದ ಮಾನದಂಡಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ಸಾಮಗ್ರಿಗಳು ಕಳಪೆ ಗುಣಮಟ್ಟದವಾಗಿದ್ದು, ತಾಂತ್ರಿಕ ನಿಯಮಗಳನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯದಿಂದ ಕೆಲಸ ನಡೆಯುತ್ತಿದೆ ಎನ್ನಲಾಗಿದೆ. ಈ ಅವ್ಯವಸ್ಥೆಗಳ ಕುರಿತು ಹಲವು ಬಾರಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕ್ಷೇತ್ರದ ಶಾಸಕರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.
ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಯೋಜನೆಯಲ್ಲಿ ಇಂತಹ ನಿರ್ಲಕ್ಷ್ಯ ನಡೆಯುತ್ತಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮೌನ ವಹಿಸಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಿ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿಗೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಂಡು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.