ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು: ಇನಾಯತ್ ಅಲಿ
Sunday, June 28, 2026
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ
ಮಂಗಳೂರು: ಬೂತ್ ಮಟ್ಟದ ಏಜೆಂಟರು ಕೇವಲ ಪಕ್ಷದ ಕಾರ್ಯಕರ್ತರಲ್ಲ, ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು. ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ, ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಚುನಾವಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ಗೆಲ್ಲುವುದಿಲ್ಲ, ಮನೆ ಮನೆಗೆ ತಲುಪಿ, ಪ್ರತಿಯೊಂದು ಮತವನ್ನು ರಕ್ಷಿಸುವ ಮೂಲಕವೇ ಗೆಲುವು ಸಾಧ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.
ಅವರು ಇಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಏಜೆಂಟರ್‌ಗಾಗಿ ಆಯೋಜಿಸಿದ್ದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ 140 ವರ್ಷಗಳ ಇತಿಹಾಸ, ಸ್ವಾತಂತ್ರ್ಯ ಹೋರಾಟದಲ್ಲಿ ಪಕ್ಷದ ಪಾತ್ರ ಹಾಗೂ ಸಂವಿಧಾನ ರಕ್ಷಣೆಯಲ್ಲಿ ಕಾಂಗ್ರೆಸ್‌ನ ಬದ್ಧತೆಯನ್ನು ವಿವರಿಸಿದ ಅವರು, ಸ್ವಾತಂತ್ರ್ಯೋತ್ತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಸ್ತುತ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಜನಜೀವನದಲ್ಲಿ ಮಹತ್ವದ ಬದಲಾವಣೆ ತಂದಿವೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಏಜೆಂಟರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಯಾವುದೇ ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಸಂಘಟನೆಯನ್ನು ಬಲಪಡಿಸುವಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಲಹೆ ನೀಡಿದರು.
ಸುಮಾರು 250ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರು ತರಬೇತಿಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್. ಪದ್ಮನಾಭ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ರೂಪೇಶ್ ರೈ, ಮಾಜಿ ಮೇಯರ್ ಶಶಿಧರ್ ಹೆಗಡೆ, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಆಳ್ವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮೆಲ್ವಿನ್ ಡಿಸೋಜಾ ಹಾಗೂ ಯು.ಪಿ. ಇಬ್ರಾಹಿಂ, ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಉಸ್ತುವಾರಿ ಮಮತಾ ಡಿ.ಎಸ್. ಗಟ್ಟಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.




