ಬೀಚ್ ಚಟುವಟಿಕೆಗೆ ತಡೆ
ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿವೆ. ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಕಡಲ ತೀರದ ಎಲ್ಲಾ ಸಾಹಸ ಹಾಗೂ ಮನರಂಜನಾ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ.
ಪ್ರವಾಸಿಗರ ನೆಚ್ಚಿನ ತಾಣಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಮುಂಗಾರು ಅವಧಿ ಮುಗಿಯುವವರೆಗೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ತೇಲುವ ಸೇತುವೆ, ಬೋಟಿಂಗ್, ಜೆಟ್ ಸ್ಕೀ, ಪ್ಯಾರಾಸೈಲಿಂಗ್ ಸೇರಿದಂತೆ ಸಮುದ್ರ ಆಧಾರಿತ ಯಾವುದೇ ಸಾಹಸ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಜೀವಕ್ಕೆ ಯಾವುದೇ ರೀತಿಯ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ.
ಇದೀಗ ಬೀಚ್‌ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಸಮುದ್ರಕ್ಕೆ ಯಾರೂ ಇಳಿಯದಂತೆ ದಡದ ಬಳಿ ಹಗ್ಗದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ನೀರಿಗೆ ಇಳಿಯಲು ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಪರಿಸ್ಥಿತಿಯ ಮೇಲೆ ನಿಗಾ ಇಡಲು ಲೈಫ್‌ಗಾರ್ಡ್ ಸಿಬ್ಬಂದಿ, ಕರಾವಳಿ ಕಾವಲುಪಡೆ ಹಾಗೂ ಸ್ಥಳೀಯ ಪೊಲೀಸರು ಬೀಚ್ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಕಾವಲು ಕಾಯುತ್ತಿದ್ದಾರೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೀಚ್ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸದಿದ್ದರೂ, ಸಮುದ್ರದ ನೀರಿಗೆ ಇಳಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕರಾವಳಿಗೆ ಭೇಟಿ ನೀಡುವವರು ದಡದ ಸುರಕ್ಷಿತ ಪ್ರದೇಶಗಳಲ್ಲಿ ಕುಳಿತು ಮುಂಗಾರು ಅಲೆಗಳ ಸೌಂದರ್ಯವನ್ನು ವೀಕ್ಷಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.