ಬಿಜೆಪಿ ಹುಟ್ಟಿನಿಂದ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡಿದೆ: ರಾಧಾಮೋಹನ್‌ದಾಸ್ ಅಗರವಾಲ್

ಬಿಜೆಪಿ ಹುಟ್ಟಿನಿಂದ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡಿದೆ: ರಾಧಾಮೋಹನ್‌ದಾಸ್ ಅಗರವಾಲ್


ಮಂಗಳೂರು: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿ ಹುಟ್ಟಿನಿಂದ ಇದುವರೆಗೆ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡಿದೆ. ಯಾವುದೇ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತದ ಜತೆ ರಾಜಿ ಮಾಡಿಕೊಂಡಿಲ್ಲ. ಯಾವುದೇ ಸವಾಲು ಎದುರಾದರೂ ಸಿದ್ಧಾಂತ ಬಿಟ್ಟು ಹೋಗಿಲ್ಲ. ಇದು ಬಿಜೆಪಿಯ ವಿಶೇಷತೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಹೇಳಿದರು.

ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಸಂಘನಿಕೇತನದಲ್ಲಿ ಮಂಗಳವಾರ ಎರಡು ದಿನಗಳ ದ.ಕ. ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಸಮಾರೋಪದಲ್ಲಿ ಅವರು ಮಾತನಾಡಿದರು.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಏಕಾತ್ಮತಾ ಮಾನವತಾವಾದ ಸಿದ್ದಾಂತದ ಅಡಿಯಲ್ಲಿ ಪಕ್ಷ ಮುನ್ನಡೆಯುತ್ತಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಮಾತಿನಂತೆ ದೇಶದ ಹಿತಕ್ಕಾಗಿ ಪಕ್ಷ ಕೆಲಸ ಮಾಡುತ್ತಿದೆ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆಶಯದಂತೆ ಜಮ್ಮು ಮತ್ತು ಕಾಶ್ಮೀರ ಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ತೆಗೆದುಹಾಕಲಾಗಿದೆ. ಪಕ್ಷದ ಆರಂಭದ ದಿನಗಳಿಂದ ಇದುವರೆಗೆ ಅನೇಕ ಹಿರಿಯರು ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ. ಅದನ್ನು ನಾವೆಲ್ಲರೂ ನೆನಪಿನಲ್ಲಿಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಎರಡು ದಿನಗಳ ಕಾಲ ಮಾದರಿಯಾಗಿ, ಅತ್ಯಂತ ಶಿಸ್ತಿನಿಂದ ಪ್ರಶಿಕ್ಷಣ ವರ್ಗ ನಡೆದಿದೆ. ಜಿಲ್ಲೆಯ ಸಂಸದರು, ಆರು ಮಂದಿ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಈ ಪ್ರಶಿಕ್ಷಣ ವರ್ಗ ಪೂರಕ ಆಗಲಿದೆ ಎಂದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಜಿಲ್ಲಾ ಪ್ರಶಿಕ್ಷಣ ಪ್ರಭಾರಿ, ಶಾಸಕ ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ವಿಭಾಗ ಪ್ರಭಾರಿ ಭಾರತೀಶ್, ಸಹ ಪ್ರಭಾರಿ ಜಯಂತ್ ಕೋಟ್ಯಾನ್, ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article