ಜಂಕ್ಷನ್, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಹಲವು ಜಂಕ್ಷನ್, ವೃತ್ತಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಪಾರ್ಕಿಂಗ್, ಒತ್ತುವರಿ, ಬೀದಿ ವ್ಯಾಪಾರದಿಂದ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿವೆ. ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡರೂ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಆರ್.ಟಿ.ಓ, ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಪರಿಶೀಲಿಸಿ ಕೈಗೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವಿದ್ ಅಝ್ಮಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆಯಂಗಡಿಯಿಂದ ತಲಪಾಡಿಯವರೆಗೆ ಪ್ರಮುಖ ಜಂಕ್ಷನ್ ವೃತ್ತಗಳಲ್ಲಿ ಸಂಚಾರ ನಿಯಂತ್ರಣಕ್ಕೆ ಹಲವಾರು ಕ್ರಮ ಕೈಗೊಳ್ಳಲಾಗಿದೆ. ಟ್ರಾಫಿಕ್ ಸಿಗ್ನಲ್, ಝೀಬ್ರಾ ಮಾಕಿರ್ಂಗ್, ವೇಗ ನಿಯಂತ್ರಕ ಸೇರಿದಂತೆ ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದ್ದ ಡಿವೈಡರ್ ಕ್ರಾಸಿಂಗ್‌ಗಳನ್ನು ಹಲವಡೆ ಮುಚ್ಚಲಾಗಿದೆ ಎಂದು ತಿಳಿಸಿದರು.
ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಪ್ರವೇಶಿಸಲು ಅಂಡರ‍್ಪಾಸ್ ಕಾಮಗಾರಿ ಪ್ರಗತಿಯಲ್ಲಿದೆ. ನಂತೂರು ಜಂಕ್ಷನ್ ಅಗಲೀಕರಣವು ನಡೆಯುತ್ತಿದ್ದು, ಕೆಪಿಟಿಯಿಂದ ನಂತೂರ‍್ವರೆಗೆ ಸರ್ವಿಸ್ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.
ಕಲ್ಲಾಪು, ಜೆಪ್ಪಿನಮೊಗರು, ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಹೆದ್ದಾರಿ ಒತ್ತುವರಿ ಮಾಡಿ ವ್ಯಾಪಾರ ಮಾಡುವುದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರು ಸಭೆಗೆ ತಿಳಿಸಿದರು.
ಮೀನು ಲಾರಿ ನೀರು ಸೋರಿಕೆ..
ನಗರದಲ್ಲಿ ಸಂಚರಿಸುತ್ತಿರುವ ಮೀನಿನ ಲಾರಿಗಳಿಂದ ನೀರು ಸೋರಿಕೆಯಾಗಿ ದುರ್ವಾಸನೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೀನಿನ ಕಾರ್ಖಾನೆ ಹಾಗೂ ಉದ್ಯಮಿಗಳ ಸಭೆಯನ್ನು ಪೊಲೀಸ್ ಇಲಾಖೆ ನಡೆಸಲಾಗಿದೆ. ಪ್ರಸ್ತುತ ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಮೀನಿನ ಲಾರಿಗಳ ನೀರುಗಳನ್ನು ವಿಸರ್ಜಿಸಲು ಸೆಪ್ಟಿಕ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ. ಇದೇ ರೀತಿ ಜಿಲ್ಲೆಯ ತಲಪಾಡಿ ಮತ್ತು ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದರೆ ತ್ಯಾಜ್ಯ ನೀರನ್ನು ಅಲ್ಲಿ ವಿಸರ್ಜಿಸಿ ರಸ್ತೆಯಲ್ಲಿ ನೀರು ಸೋರಿಕೆಯನ್ನು ತಡೆಗಟ್ಟಬಹುದು ಎಂದು ಉದ್ಯಮಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸಭೆಗೆ ತಿಳಿಸಿದರು.
ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಹ್ಯಾಮಿಲ್ಟನ್ ವೃತ್ತವನ್ನು ವೈಜ್ಞಾನಿಕವಾಗಿ ನಿರ್ಮಿಸಲು ಎನ್.ಐ.ಟಿ.ಕೆ ವತಿಯಿಂದ ಮಹಾನಗರಪಾಲಿಕೆಗೆ ವರದಿ ನೀಡಲಾಗಿದ್ದು, ಅದರಂತೆ ಹ್ಯಾಮಿಲ್ಟನ್ ವೃತ್ತದ ನಕ್ಷೆಯನ್ನು ಸಲ್ಲಿಸಲಾಗಿದೆ. ಇದನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳು ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ನಗರಪಾಲಿಕೆಗೆ ಸೂಚಿಸಿದರು.