ಐದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶ: ಬೆಳ್ತಂಗಡಿಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಐದೂವರೆ ಕೋಟಿ ಮೌಲ್ಯದ ಮಾದಕ ವಸ್ತು ವಶ: ಬೆಳ್ತಂಗಡಿಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು


ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಕೆಲ ದಿನಗಳ ಹಿಂದೆ ಪತ್ತೆಯಾದ ಐದೂವರೆ ಕೋಟಿ ರೂ. ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ, ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಜಲೀಲ್ ಬಾಬಾ ನಾಪತ್ತೆಯಾಗಿದ್ದಾನೆ.

ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಂಗಳೂರಿನ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಆರೋಪಿಯಾಗಿ ಜಲೀಲ್ ಬಾಬಾ ಎಂಬವನ ಹೆಸರನ್ನು ಉಲ್ಲೇಖಿಸಿದ್ದು, ದಸ್ತಗಿರಿಗೆ ಬಾಕಿ ಎಂದು ವರದಿ ಸಲ್ಲಿಸಿದ್ದಾರೆ.

ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28), ಉಜಿರೆ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28), ಇಂದಬೆಟ್ಟು ಗ್ರಾಮದ ದೇವನಾರಿ ನಿವಾಸಿ ಅಲ್ಫಾಜ್ ಮತ್ತು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಈ ಪೈಕಿ ಮನುವನ್ನು ಜೈಲಿಗಟ್ಟಲಾಗಿದ್ದು ಉಳಿದ ಆರೋಪಿಗಳ ವಿರುದ್ಧವೂ ಕ್ರಮ ಜರುಗಿಸಲಾಗಿದೆ.

ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ 1.50 ಲಕ್ಷ ರೂ. ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು.

ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಅಂದಾಜು ಐದೂವರೆ ಕೋಟಿ ರೂ. ಮೌಲ್ಯದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ, ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂದು ಎನ್ನಲಾಗಿದೆ. ಆರೋಪಿಗಳು ಬಾಯಿ ಬಿಟ್ಟಂತೆ ಜಲೀಲ್ ಬಾಬಾ ಎಂಬಾತ ತನ್ನ ಆಂಬ್ಯುಲೆನ್ಸ್ ವಾಹನವನ್ನು ಇದಕ್ಕಾಗಿ ಒಳಕೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಪ್ರಕರಣದಲ್ಲಿ ಕಾಣಿಸಿಕೊಂಡಂತೆ ಇದೀಗ ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಮೊಬೈಲ್ ಪೋನ್ ಸ್ವಿಚ್ಚ್ ಆಫ್ ಮಾಡಲಾಗಿದ್ದು ತುರ್ತು ಆಂಬ್ಯುಲೆನ್ಸ್ ಕರೆಯನ್ನೂ ಸ್ವೀಕರಿಸುತ್ತಿಲ್ಲ. ಆತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ಎಸ್.ಪಿ ಮತ್ತು ಕಮಿಷನರ್ ಅವರ ಮಾರ್ಗದರ್ಶನದ ತಂಡ ಕಾರ್ಯಾಚರಣೆ ಆರಂಭಿಸಿದೆ ಎಂದು ಮಾಹಿತಿ ಲಭಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article