ದ.ಕ. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಸುರಿದ ಮಳೆ: ಜುಲೈ 22ರ ನಂತರ ಕರಾವಳಿಯಲ್ಲಿ ಮಳೆಯ ಅಬ್ಬರ ಕ್ಷೀಣ ಸಾಧ್ಯತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ದಿನವಿಡೀ ಬಿಟ್ಟು ಬಿಟ್ಟು ಉತ್ತಮ ಮಳೆಯಾಗಿದೆ. ಬೆಳಗಿನ ಜಾವದಿಂದಲೇ ಆರಂಭವಾದ ಜಿಟಿಜಿಟಿ ಮಳೆ, ಸಂಜೆಯ ವೇಳೆಗೆ ಗ್ರಾಮೀಣ ಭಾಗಗಳಲ್ಲಿ ಬಿರುಸು ಪಡೆದುಕೊಂಡಿತು. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗುವ ಲಕ್ಷಣಗಳು ಕಂಡುಬರುತ್ತಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ, ಚಾರ್ಮಾಡಿ ಘಾಟಿ ಪ್ರದೇಶ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟದ ತಳಭಾಗದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವ ವರದಿಯಾಗಿದೆ. ಗಡಿ ಜಿಲ್ಲೆ ಕಾಸರಗೋಡು ಸೇರಿದಂತೆ ಕರಾವಳಿಯ ಇತರೆಡೆಗಳಲ್ಲೂ ದಿನವಿಡೀ ಸೂರ್ಯನ ದರ್ಶನವೇ ಆಗದೆ, ಮೋಡ ಮುಸುಕಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ
ಹವಾಮಾನ ಇಲಾಖೆಯ ಪ್ರಸ್ತುತ ಮುನ್ಸೂಚನೆಗಳ ಪ್ರಕಾರ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದಿನ ದಿನಗಳಲ್ಲಿ ಕೊಂಚ ತಗ್ಗುವ ಲಕ್ಷಣಗಳಿವೆ. ಜುಲೈ 22ರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಕರಾವಳಿಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆಇಲ್ಲದಿದ್ದರೂ, ಘಟ್ಟ ಪ್ರದೇಶಗಳಲ್ಲಿ ಮತ್ತು ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಹೀಗಾಗಿ ಸಾರ್ವಜನಿಕರು ಹಾಗೂ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.
ಕಡಬದಲ್ಲಿ ಅತೀ ಹೆಚ್ಚು ಮಳೆ
ಸೋಮವಾರ ಬೆಳಗ್ಗಿನ ವರೆಗೆ ಜಿಲ್ಲೆಯಲ್ಲಿ ಒಟ್ಟು 54.7 ಮಿ.ಮೀ ಮಳೆ ದಾಖಲಾಗಿದೆ. ಜಿಲ್ಲೆಯ ಗರಿಷ್ಠ ಮಳೆ ಮೂಡುಬಿದಿರೆ 73.3 ಮಿ.ಮೀ ಮಳೆಯಾಗಿದೆ. ಕಡಬದಲ್ಲಿ 57.6 ಮಿಮಿ, ಬೆಳ್ತಂಗಡಿ 56.7 ಮಿ.ಮೀ, ಬಂಟ್ವಾಳ 46.4 ಮಿ.ಮೀ, ಪುತ್ತೂರು 39.0 ಮಿ.ಮೀ, ಮಂಗಳೂರಿನಲ್ಲಿ 53.8 ಮಿಮಿ ಮಳೆಯಾದರೆ, ಉಳ್ಳಾಲದಲ್ಲಿ 6.9 ಮಿಮಿ ಮಳೆಯಾಗಿದೆ. ಸುಳ್ಯದಲ್ಲಿ 62.3 ಮಿ.ಮೀ., ಮೂಲ್ಕಿ 33.4 ಮಿ.ಮೀ. ಮಳೆ ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನೇತ್ರಾವತಿ ನದಿ (ಬಂಟ್ವಾಳ) 5.880 ಮೀ, ನೇತ್ರಾವತಿ ನದಿ (ಉಪ್ಪಿನಂಗಡಿ) 25 ಮೀ, ಕುಮಾರಧಾರ ನದಿ (ಪುಲಿಕ್ಕುಕ್ಕು) 79.585 ಮೀ, ಗುರುಪುರ ನದಿ (ಅಡ್ಡೂರು) 2.9 ಮೀ ನೀರಿದೆ. ನದಿಗಳ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ತಗ್ಗು ಪ್ರದೇಶಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ನದಿ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಜುಲೈ 25ರ ನಂತರ ಮುಂಗಾರು ನಿಧಾನ?
ಜುಲೈ ಮೂರನೇ ವಾರದ ಅಂತ್ಯದ ವೇಳೆಗೆ ಹವಾಮಾನದಲ್ಲಿ ಮತ್ತಷ್ಟು ಏರುಪೇರಾಗುವ ಸಾಧ್ಯತೆಗಳಿದ್ದು, ನೈಋತ್ಯ ಮುಂಗಾರು ಜುಲೈ 25ರ ನಂತರ ಕೊಂಚ ನಿಧಾನಗತಿಯನ್ನು ಪಡೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಒಟ್ಟಿನಲ್ಲಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ತಂಪಾಗಿದ್ದ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ.
ಮಂಗಳೂರಿನಲ್ಲಿ ಮಳೆಯ ಅಬ್ಬರ: ಚಲಿಸುತ್ತಿದ್ದ ಕಾರಿಗೆ ಬಿದ್ದ ಬೃಹತ್ ಮರ
ಭಾರೀ ಮಳೆಯ ಅಬ್ಬರಕ್ಕೆ ನಗರದ ಬಾವುಟಗುಡ್ಡೆ ಅಲೋಶಿಯಸ್ ಕಾಲೇಜು ಸಮೀಪದ ಒಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರವು ಕಾರಿನ ಹಿಂಭಾಗಕ್ಕೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು, ಪಕ್ಕದಲ್ಲಿದ್ದ ಕ್ಯಾಂಟೀನ್‌ಗೂ ಹಾನಿಯಾಗಿದೆ. ಘಟನೆಯ ಬಳಿಕ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಮಾಹಿತಿ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್, ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ಭಾರೀ ಮಳೆಯ ಹಿನ್ನೆಲೆಯಲ್ಲಿ ನಗರದಲ್ಲಿ ದುರ್ಬಲ ಮರಗಳ ಅಪಾಯ ಹೆಚ್ಚಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.