ನೀಟ್ ಪರೀಕ್ಷಾ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ, ಪ್ರಜಾಪ್ರಭುತ್ವದ ಗೆಲುವು

ನೀಟ್ ಪರೀಕ್ಷಾ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ, ಪ್ರಜಾಪ್ರಭುತ್ವದ ಗೆಲುವು

ಮಂಗಳೂರು: ನೀಟ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ದೇಶದ ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು ಹನ್ನೆರಡು ವರ್ಷಗಳ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಒಬ್ಬ ಸಚಿವರು ರಾಜೀನಾಮೆ ನೀಡುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇಷ್ಟೊಂದು ವರ್ಷಗಳಲ್ಲಿ ಯಾವುದೇ ಪ್ರಕರಣಕ್ಕೆ ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ ನೀಟ್ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸಿದ ಹೋರಾಟ, ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟ ಮತ್ತು ಸಾರ್ವಜನಿಕರ ಒತ್ತಡದ ಫಲವಾಗಿ ಈ ರಾಜೀನಾಮೆ ಸಂಭವಿಸಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ.

ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರುವ ಈ ಪ್ರಕರಣದ ವಿರುದ್ಧ ದೇಶದಾದ್ಯಂತ ನಡೆದ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿದ್ದು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಬಿಜೆಪಿ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸಿದೆ. ವಿದ್ಯಾರ್ಥಿಗಳ ನ್ಯಾಯಕ್ಕಾಗಿ ನಡೆದ ಈ ಹೋರಾಟದ ಫಲವಾಗಿ ದೊರೆತಿರುವ ಈ ರಾಜೀನಾಮೆ ವಿದ್ಯಾರ್ಥಿಗಳ ಮೊದಲ ಗೆಲುವಾಗಿದೆ.

ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಜನಸಾಮಾನ್ಯರಲ್ಲಿ ಈಗಾಗಲೇ ಅಸಮಾಧಾನ ಹೆಚ್ಚುತ್ತಿದೆ. ಈ ಬೆಳವಣಿಗೆ ದೇಶದಲ್ಲಿ ನಡೆಯುತ್ತಿರುವ ಆಡಳಿತದ ನೈಜ ಸ್ವರೂಪವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದೆ.

ನೀಟ್ ಪರೀಕ್ಷಾ ಅಕ್ರಮ ಹಾಗೂ ಅದರ ಪರಿಣಾಮವಾಗಿ ಜೀವ ಕಳೆದುಕೊಂಡಿರುವ 27 ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ತಲಾ 1 ಕೋಟಿ ರೂ. ಪರಿಹಾರವನ್ನು ಘೋಷಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಐವನ್ ಡಿ’ಸೋಜಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article