ಹೃದಯವಿದ್ರಾವಕ ಘಟನೆ: ವೇದವ್ಯಾಸ ಕಾಮತ್ ಸಂತಾಪ
Wednesday, July 1, 2026
ಮಂಗಳೂರು: ನಗರದ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದು ಹೃದಯವಿದ್ರಾವಕ ಘಟನೆ ಎಂದು ಶಾಸಕ ವೇದವ್ಯಾಸ ಕಾಮತ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ಯಾವುದೇ ವಿಳಂಬವಿಲ್ಲದೆ ಸೂಕ್ತ ಪರಿಹಾರ ದೊರೆಯುವಂತೆ ಜಿಲ್ಲಾಧಿಕಾರಿಗಳ ಜತೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹವಾಮಾನ ಇಲಾಖೆ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಅಪಾಯಕಾರಿ ಎಂದು ಗುರುತಿಸಲಾಗಿರುವ ಪ್ರದೇಶಗಳಲ್ಲಿ ವಾಸಿಸುವ ಜನರ ಸುರಕ್ಷತೆಗೆ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.