ನೈಜ ಮತದಾರರ ನೋಂದಣಿಗೆ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡಬೇಕು: ಐವನ್

ನೈಜ ಮತದಾರರ ನೋಂದಣಿಗೆ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡಬೇಕು: ಐವನ್


ಮಂಗಳೂರು: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ನೈಜ ಮತದಾರರ ನೋಂದಣಿಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 203 ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಕೋ-ಆರ್ಡಿನೇಟರ್‌ಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಏಜೆಂಟರು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಮತದಾರರ ನೋಂದಣಿ ಪ್ರಕ್ರಿಯೆಗೆ ನೆರವಾಗಬೇಕು. ಈ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಿದರೆ ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗುವುದನ್ನು ತಡೆಯಬಹುದು ಎಂದು ಹೇಳಿದರು.

ಯಾವುದೇ ಕಾರಣಕ್ಕೂ ನೈಜ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಅದೇ ವೇಳೆ ಅನ್ಯ ಉದ್ದೇಶಕ್ಕಾಗಿ ನಗರಕ್ಕೆ ಬಂದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಯತ್ನಿಸುವವರ ಬಗ್ಗೆ ಜಾಗರೂಕರಾಗಿರಬೇಕು. ನೈಜ ಮತದಾರರಿಂದ ಅಗತ್ಯ ದಾಖಲೆಗಳೊಂದಿಗೆ ಎನ್ಯೂಮರೇಷನ್ ಫಾರ್ಮ್ ಹಾಗೂ ನಮೂನೆ-೭ ಸೇರಿದಂತೆ ಸಂಬಂಧಿತ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿಸಿ ಸಲ್ಲಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮನೆ-ಮನೆಗೆ ಭೇಟಿ ನೀಡುವ ವೇಳೆ ಮಳೆಗಾಲದಲ್ಲಿ ದಾಖಲೆಗಳು ಹಾಗೂ ಎನ್ಯೂಮರೇಷನ್ ಫಾರ್ಮ್‌ಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಅನುಕೂಲವಾಗುವ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಅವರು ಭಾಗವಹಿಸಿ ಬ್ಯಾಗ್‌ಗಳನ್ನು ವಿತರಿಸಿ, ಮಾತನಾಡಿದ ಅವರು, ನೈಜ ಮತದಾರರನ್ನು ಗುರುತಿಸುವ ಕಾರ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾದ ಸಮಸ್ಯೆಗಳು ಹಾಗೂ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಜನರಲ್ಲಿ ಜಾಗೃತಿ ಮೂಡಿಸಿ ಎನ್ಯೂಮರೇಷನ್ ಫಾರ್ಮ್‌ಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಲು ನೆರವಾಗುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಬ್ದುಲ್ ಸಲೀಂ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಎಸ್‌ಐಆರ್ ಸಂಯೋಜಕರು, ಬಿಎಲ್‌ಎ-2ಗಳು ಹಾಗೂ ಕಾಂಗ್ರೆಸ್ ಮುಖಂಡರು, ಕ್ಷೇತ್ರದ ಎಸ್‌ಐಆರ್ ಕೋ-ಆರ್ಡಿನೇಟರ್‌ಗಳು, ಕಾಂಗ್ರೆಸ್ ಮುಖಂಡರು, ಬಿಎಲ್‌ಎಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article