ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ: ಡಾ. ಕವಿತಾ ಕೆ.ಆರ್.
ಕಾರ್ಯಕ್ರಮದ ಮುಖ್ಯ ಅತಿಥಿ ಮಂಗಳೂರು ರನ್ನರ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರೇಡಿಯೋಲಜಿ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ರೈ ಮಾತನಾಡಿ, ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಪರಿಸರ ಕಾಳಜಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಜಲ ಸಂರಕ್ಷಣೆಯ ರಾಯಭಾರಿಯಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇಲ್ಲಿನ ನಿವೃತ್ತ ಪ್ರಾಂಶುಪಾಲ ಪ್ರೊ. ಜಗದೀಶ್ ಬಾಳ ಮಾತನಾಡಿ, ಜಲದ ಮೌಲ್ಯವನ್ನು ಅರಿಯದೆ ಅದರ ದುರ್ಬಳಕೆ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಕೃತಿಯೊಂದಿಗೆ ಸಮನ್ವಯ ಸಾಧಿಸುವ ಮೂಲಕವೇ ಮುಂದಿನ ಪೀಳಿಗೆಗೆ ಸುರಕ್ಷಿತ ಪರಿಸರವನ್ನು ನಿರ್ಮಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಬಗ್ಗೆ ಕಾಳಜಿಯನ್ನು ತೋರಿಸುವುದು ಅತ್ಯಂತ ಅವಶ್ಯಕ. ಜಲ ಸಂಪನ್ಮೂಲಗಳ ಸಂರಕ್ಷಣೆ ಕುರಿತ ಅರಿವು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಅಭ್ಯಾಸವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ಆಲ್ವಿನ್ ಸೆರಾವೊ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆ.ಆರ್.ಎಂ.ಎಸ್.ಎಸ್. ಮಂಗಳೂರು ವಿಭಾಗದ ಮಹಿಳಾ ಪ್ರಮುಖ್ ಪ್ರೊ. ಸುಭಾಷಿಣಿ ಶ್ರೀವತ್ಸ, ಎಂ ಆರ್ ಸಿ ಸದಸ್ಯ ಚಂದ್ರಶೇಖರ ಶೆಟ್ಟಿ, ಕೆ ಆರ್ ಎಂ ಎಸ್ ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಜಾಯೆಲ್ ಮಸ್ಕರೇನಸ್ ಸ್ವಾಗತಿಸಿದರು. ಉಪನ್ಯಾಸಕಿ ಮಮತಾ ಶೆಟ್ಟಿ ಪ್ರಸ್ತಾವನೆಗೈದರು. ವಿದ್ಯಾರ್ಥಿನಿ ವನ್ಯ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು.

