ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ


ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಇವುಗಳ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಕಲ್ಲಬೆಟ್ಟುವಿನ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಸುಸಜ್ಜಿತ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.


ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್. ಎನ್. ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ, “ಕ್ರೀಡೆ ಎಂದರೆ ಕೇವಲ ಪದಕ ಅಥವಾ ಬಹುಮಾನ ಪಡೆಯುವುದಲ್ಲ ಅದು ವ್ಯಕ್ತಿತ್ವ ನಿರ್ಮಾಣದ ಶ್ರೇಷ್ಠ ಸಾಧನವಾಗಿದೆ. ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ಸಹಕಾರ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಕ್ರೀಡೆ ಬೆಳೆಸುತ್ತದೆ.

ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಇವೆರಡೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತವೆ” ಎಂದು ಹೇಳಿದರು.

“ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಅನೇಕ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವ ಮೂಲಕ ಈ ಸಂಸ್ಥೆ ಜಿಲ್ಲೆಯಲ್ಲಿಯೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ಯಶಸ್ಸು ಸಾಧಿಸಲು ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ತಾಲೂಕು ಮಟ್ಟದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸಾಧನೆಯತ್ತ ಹೆಜ್ಜೆಯಿಡುವ ಗುರಿಯನ್ನು ಹೊಂದಬೇಕು. ನಿಮ್ಮ ಸಾಧನೆಯೇ ನಿಮ್ಮ ಕುಟುಂಬ, ಶಾಲೆ ಹಾಗೂ ಸಮಾಜದ ಹೆಮ್ಮೆಯಾಗಲಿ” ಎಂದು ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿಫ್ರೆಡ್ ಪಿಂಟೋ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭ ಕೋರಿದರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮವನ್ನು  ನಿರೂಪಿಸಿ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article