ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನ ಆಚರಣೆ
Sunday, July 12, 2026
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಮಾನವಿಕ ವಿಭಾಗದ ವತಿಯಿಂದ ವಿಶ್ವ ಜನಸಂಖ್ಯಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋರವರು ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ವಿಶ್ವದ ಜನಸಂಖ್ಯೆಯ ಸ್ಥಿತಿಗತಿಗಳನ್ನು ವಿಶ್ಲೇಷಿಸಿ, ಸರಳ ಜೀವನವನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು’ ಎಂದು ಕರೆ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ವಾಸುದೇವ ಎನ್. ಅವರು, ಜನಸಂಖ್ಯೆಯ ನಿರಂತರ ಹೆಚ್ಚಳದಿಂದ ವಿಶ್ವ ಎದುರಿಸುತ್ತಿರುವ ಸವಾಲುಗಳು, ಸಂಪನ್ಮೂಲಗಳ ಮೇಲಿನ ಒತ್ತಡ ಹಾಗೂ ಸುಸ್ಥಿರ ಅಭಿವೃದ್ಧಿಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ಉಪಸ್ಥಿತರಿದ್ದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಫಾತಿಮತ್ ರಿಫಾ ಸ್ವಾಗತಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿ ಅವಿನಾಶ್ ವಂದಿಸಿ, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹರ್ಷಿತಾ ಪಿ.ವಿ. ಕಾರ್ಯಕ್ರಮವನ್ನು ನಿರೂಪಿಸಿದರು.


