ಮಂಗಳೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಅಸೈಗೋಳಿ ನೇಮಕ
ಉಳ್ಳಾಲ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ನೇಮಕಾತಿಯನ್ನು ಅಧಿಕೃತವಾಗಿ ಘೋಷಿಸಿದರು.
ಪ್ರಕಾಶ್ ಶೆಟ್ಟಿ ಅಸೈಗೋಳಿ ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದವರು. ಬಳಿಕ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪರ ಆಡಳಿತ ಹಾಗೂ ಸಂಘಟನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ, ಆಡಳಿತ ಅನುಭವ, ಪಕ್ಷದ ಮೇಲಿನ ನಿಷ್ಠೆ ಹಾಗೂ ನಾಯಕತ್ವದ ಗುಣಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ಪಕ್ಷ ವಹಿಸಿದೆ ಎಂದು ಜಾಕೆ ಮಾಧವ ಗೌಡ ಹೇಳಿದರು.
ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದು, ಯುವಕರನ್ನು ಹಾಗೂ ಹೊಸ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸುವುದು, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ಮುಂಬರುವ ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಮತ್ತು ಇತರ ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷವನ್ನು ಬಲಪಡಿಸುವ ಕಾರ್ಯವನ್ನು ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಹೇಳಿದರು.
ನೇಮಕಾತಿಯನ್ನು ಸ್ವೀಕರಿಸಿದ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಪಕ್ಷದ ಹಿರಿಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಾಧ್ಯಕ್ಷ ಇಕ್ಬಾಲ್ ಮುಲ್ಕಿ, ವಸಂತ್ ಪೂಜಾರಿ, ಶಶಿರಾಜ್ ಶೆಟ್ಟಿ ಕೊಳಂಬೆ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಯುವ ಘಟಕ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಮೀನುಗಾರ ಘಟಕ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ, ಜನತಾದಳ ಮುಖಂಡರಾದ ಹೈದರ್ ಪರ್ತಿಪಾಡಿ, ಗಂಗಾಧರ್ ಉಳ್ಳಾಲ್ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.