ಭಾರೀ ಗಾಳಿ: ರಸ್ತೆಗುರುಳಿದ ಮರಗಳು
Tuesday, July 7, 2026
ವಿಟ್ಲ: ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ, ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ-ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದರು.
ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಾಹನಗಳನ್ನು ಕೊಡಾಜೆ ಗಡಿ-ಬೊಲ್ಲುಕಲ್ಲು ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು. ಬಳಿಕ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು.