ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಹಠಾತ್ ಭೇಟಿ, ಕಡತ ಪರಿಶೀಲನೆ
Wednesday, August 12, 2026
ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದನ್ವಯ ಲೋಕಾಯುಕ್ತ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ಭೇಟಿ ನೀಡಿದ್ದು, ಬಂಟ್ವಾಳ ತಾಲೂಕು ಕಚೇರಿಗೂ ಬುಧವಾರ ಹಠಾತ್ ಭೇಟಿ ನೀಡಿ ವಿವಿಧ ಕಡತಗಳ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕೆ.ಎನ್. ನೇತೃತ್ವದ ತಂಡ ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು. ಕಚೇರಿಯಲ್ಲಿನ ಕಡತಗಳ ವಿಲೇವಾರಿ, ಬಾಕಿ ಇರುವ ಅರ್ಜಿಗಳು ಹಾಗೂ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಈ ಸಂದರ್ಭ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬಂಟ್ವಾಳ ತಾಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಸಂಬಂಧಿತ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಪ್ರಕರಣಕ್ಕೆ ಸಂಬಂಧಿಸಿದ ಕಡತಗಳಲ್ಲಿರುವ ದಾಖಲೆಗಳು, ಹಿಂದಿನ ಆದೇಶಗಳು, ಅರ್ಜಿಗಳ ವಿಲೇವಾರಿ ಹಾಗೂ ಸಂಬಂಧಿತ ಪ್ರಕ್ರಿಯೆಗಳ ಕುರಿತು ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಗೆ ಸಂಬಂಧಿಸಿದ ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಗೊಳಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡದಂತೆ ಲೋಕಾಯುಕ್ತ ಅಧಿಕಾರಿಗಳು ತಾಕೀತು ಮಾಡಿದ್ದಾರೆಂದು ತಿಳಿದು ಬಂದಿದೆ.