ಪಾಂಡೇಶ್ವರ ಕಾಲೀಜಿನಲ್ಲಿ  ರ‍್ಯಾಗಿಂಗ್: ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರದಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಲ್ಲೆ

ಪಾಂಡೇಶ್ವರ ಕಾಲೀಜಿನಲ್ಲಿ ರ‍್ಯಾಗಿಂಗ್: ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರದಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಲ್ಲೆ

ಮಂಗಳೂರು: ನಗರದ ಪಾಂಡೇಶ್ವರದ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.

ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆರು ಮಂದಿ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ ಮತ್ತು ಜಾಸಿನ್ ಮೇಲೆ ದ್ವಿತೀಯ ವರ್ಷದ ಲಾಜೆಸ್ಟಿಕ್ ವಿಭಾಗದ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಇಬ್ಬರೂ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ.

ಮೇಲ್ನೋಟಕ್ಕೆ ರ‍್ಯಾಗಿಂಗ್..

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ 2ನೇ ವರ್ಷದ 4 ರಿಂದ 6 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ವರದಿಯಾಗಿದೆ. ಮೇಲ್ನೋಟಕ್ಕೆ ಇದೊಂದು ರ‍್ಯಾಗಿಂಗ್ ಘಟನೆಯಂತೆ ಕಂಡುಬರುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಪ್ರಸ್ತುತ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಲಾಗುವುದು. ತನಿಖೆಯ ನಂತರವೇ ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಆಸ್ಪತ್ರೆಗೆ ತೆರಳಿ ವಿಚಾರಣೆ ನಡೆಸುತ್ತಿದ್ದು, ತನಿಖೆ ಚುರುಕುಗೊಂಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article