ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ: ಸತೀಶ್ ಕುಂಪಲ

ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ: ಸತೀಶ್ ಕುಂಪಲ


ಮಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುರುವಾರದಿಂದ ಆರಂಭಗೊಳ್ಳುವ ವಿಧಾನ ಮಂಡಲ ಅಧಿವೇಶನದಲ್ಲಿ ಹಾಗೂ ರಾಜ್ಯಾದ್ಯಂತ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಗುರುವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಗೂ ಅಧಿಕ ಹಣ ದುರ್ಬಳಕೆ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆಸ್ ಭ್ರಷ್ಟರಿಗೆ ಮಣೆ ಹಾಕುತ್ತದೆ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ಸಚಿವ ನಾಗೇಂದ್ರ ಅವರನ್ನು ಕೈ ಬಿಡುವವರೆಗೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದ ಒಳಗೆ ಧ್ವನಿ ಎತ್ತಲಿದ್ದಾರೆ. ರಾಜ್ಯಾದ್ಯಂತ ಯಾವ ರೀತಿನ ಪ್ರತಿಭಟನೆ ನಡೆಯಬೇಕು ಎನ್ನುವ ನಿಟ್ಟಿನಲ್ಲಿ  ಪಕ್ಷದ ವರಿಷ್ಠರು ಶೀಘ್ರವೇ ತೀರ್ಮಾನ ಕೈಗೊಳ್ಳುವರು ಎಂದರು.

ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬರುವ ಮುನ್ನ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ವಾಗ್ದಾನ ನೀಡಿದ್ದರು. ಆದರೆ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವೆಲ್ಲವನ್ನು ಮರೆತಿದ್ದಾರೆ. ಭ್ರಷ್ಟರ ಕೈಗೆ ಸಚಿವ ಸ್ಥಾನ ನೀಡಿದರೆ ರಾಜ್ಯದ ಸ್ಥಿತಿ ಮತ್ತಷ್ಟು ಹದಗೆಡಲಿದೆ. ಆದ್ದರಿಂದ ಹೋರಾಟ ಅನಿವಾರ್ಯ ಎಂದವರು ಹೇಳಿದರು.

ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮರುಪರಿಶೀಲನೆ ಹೆಸರಿನಲ್ಲಿ ಕಡಿತ ಮಾಡಲು ಹೊರಟಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಸುಮಾರು 18.5 ಲಕ್ಷಕ್ಕೂ ಹೆಚ್ಚು ಬಡವರ ಪಿಂಚಣಿ ಯೋಜನೆಯನ್ನು ಕಡಿತಗೊಳಿಸಿ ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಸತೀಶ್ ಕುಂಪಲ ಆಕ್ರೋಶ ವ್ಯಕ್ತಪಡಿಸಿದರು.

ತಿರಂಗಾಯಾತ್ರೆ..

ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆ ಮತ್ತು ಪಕ್ಷದ ನಿರ್ದೇಶನದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ‘ತಿರಂಗಾ ಯಾತ್ರೆ’ಯನ್ನು ಸಂಘಟಿಸಲಾಗುತ್ತಿದೆ. ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಪ್ರೇಮದ ಸಂದೇಶ ಸಾರಬೇಕು ಎಂದವರು ಹೇಳಿದರು.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮುಖಂಡರಾದ ವಿಕಾಸ್ ಪುತ್ತೂರು, ಸುನಿಲ್ ಆಳ್ವ, ಸಂಜಯ ಪ್ರಭು, ಜಗದೀಶ್ ಆಳ್ವ, ವಸಂತ್ ಪೂಜಾರಿ, ಶಿವಕುಮಾರ್, ರಮೇಶ್ ಕಂಡೆಟ್ಟು, ಕದ್ರಿ ಮನೋಹರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article