ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ‘ಡಿಸಿ ಕಚೇರಿ ಚಲೋ’
ಬ್ರಹ್ಮರಕೂಟ್ಲು ಟೋಲ್ ಗೇಟ್ನಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಟೋಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಾದಯಾತ್ರೆಗೆ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಅವರು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರಿಗೆ ಪಂಜು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಸರ್ಕಾರ ಕೂಡಲೇ ಮುಚ್ಚಬೇಕು ಹಾಗೂ ಜನರ ಮೇಲಿನ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಎಸ್‌ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮಾತನಾಡಿ, ಕಾರ್ಮಿಕರ ಬದುಕಿಗೆ ಹೊರೆಯಾಗಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಕಡ್ಡಾಯವಾಗಿ ತೆರವುಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್ಡಿಟಿಯು ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಮಾತನಾಡಿ, ಟೋಲ್ ಗೇಟ್ ತೆರವುಗೊಳ್ಳುವವರೆಗೆ ಹೋರಾಟ ನಿಲ್ಲದು. ಲೋಕಸಭಾ ಸದಸ್ಯರು ಜನರ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಟೋಲ್ ಗೇಟ್ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಮಾತನಾಡಿದರು.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಜಿಲ್ಲಾಧಿಕಾರಿಯವರ ಪರವಾಗಿ ಮನವಿ ಸ್ವೀಕರಿಸಲು ಆಗಮಿಸಿದ್ದ ಅಧಿಕಾರಿಗಳ ಮುಂದೆ ಪಕ್ಷದ ಬೇಡಿಕೆಗಳನ್ನು ಮಂಡಿಸಿ ಮನವಿ ಪತ್ರವನ್ನು ಹಸ್ತಾಂತರಿಸಿದರು.
ಪಾದಯಾತ್ರೆಯಲ್ಲಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು, ಯಂಗ್ ಡೆಮಾಕ್ರಟ್ಸ್ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ, ಎಸ್ಡಿಟಿಯು ಗ್ರಾಮಾಂತರ ಜಿಲ್ಲಾಧ್ಯಕ್ಷ ಪಿಲಿಪ್ ಹೆನ್ರಿ ಡಿ ಸೋಜ, ಎಸ್ಡಿಟಿಯು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ರಹಿಮಾನ್ ಬೋಳಿಯಾರ್, ಎಸ್ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿ ಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ನವಾಝ್ ಕಟ್ಟೆ, ಎಸ್ಡಿಪಿಐ ನಗರ ಉಪಾಧ್ಯಕ್ಷ ಅಝೀಝ್ ಸುರತ್ಕಲ್, ನಗರ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಯಾಸಿನ್ ಅರ್ಕುಳ ಮೊದಲಾದವರಿದ್ದರು.