ಪುತ್ತಿಗೆ ಗ್ರಾಮಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸ್ಪಷ್ಟನೆ ನೀಡಬೇಕು: ಪಿಡಿಒಗೆ ಮನವಿ
Monday, August 31, 2026
ಮೂಡುಬಿದಿರೆ: ಪುತ್ತಿಗೆ ಗ್ರಾಮಸಭೆಯಲ್ಲಿ ಗಣಿ ಇಲಾಖೆ, ಮೂಡಾ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಪಿಡಿಒ ಭೀಮ ನಾಯಕ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಸರ್ವೆ ನಂಬರ್‌ಗಳು, ಜಮೀನುಗಳು ಮೂಡುಬಿದಿರೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆಯಾಗಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಗಳು ಉಂಟಾಗಿವೆ. ಈ ಕುರಿತು ಸ್ಪಷ್ಟನೆ ನೀಡಲು ಮೂಡಾ ಅಧಿಕಾರಿಗಳು ಗ್ರಾಮಸಭೆಗಳಲ್ಲಿ ಖುದ್ದಾಗಿ ಭಾಗವಹಿಸಬೇಕು.
ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಬಾಕ್ಸೈಟ್, ಕಲ್ಲು ಗಣಿಗಾರಿಕೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಗಣಿ ಇಲಾಖೆಯ ಅಧಿಕಾರಿಗಳು ಗ್ರಾಮಸಭೆಗಳಲ್ಲಿ ಭಾಗವಹಿಸಿ ಉತ್ತರಿಸಬೇಕು.
ಹದಗೆಟ್ಟಿರುವ ರಸ್ತೆ ಸಮಸ್ಯೆ ಕುರಿತು ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೂ ಗ್ರಾಮಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ಹಾಜರಾಗದಿದ್ದರೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ರೋಷನ್ ಸಂಪಿಗೆ ಹಾಜರಿದ್ದರು.