ಕೆಎಸ್‌ಆರ್‌ಟಿಸಿ ಬಸ್ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು
Tuesday, August 11, 2026
ಉಜಿರೆ: ಉಜಿರೆಯ ನೀರಚಿಲುಮೆಯ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ.11 ರಂದು ಬೆಳಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸೋಮನಾಥ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಹೆದ್ದಾರಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.