ಜೋಗಿ ಸಹಕಾರಿ ಸಂಘದ ಕಾ.ನಿ. ಅಧಿಕಾರಿ ಆತ್ಮಹತ್ಯೆ
ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ, ರಥಬೀದಿಯಲ್ಲಿನ ಕಚೇರಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆ.24ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ತನ್ನ ಸಾವಿಗೆ ತಾನೇ ಕಾರಣ’ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ಸಮಸ್ಯೆ ಅಥವಾ ಇತರ ಯಾವುದೇ ಕಾರಣದಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಮೃತರ ಸಹೋದರ ರಾಜೇಶ್ ಜೋಗಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.