‘ನಿರ್ಮಯ’-ನಶಾ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ

‘ನಿರ್ಮಯ’-ನಶಾ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ


ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್‌ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ‘ನಿರ್ಮಯ-ನಶಾ ಮುಕ್ತ ಭಾರತ ಅಭಿಯಾನ’ ಒಂದು ವಾರದ ಜಾಗೃತಿ ಕಾರ್ಯಕ್ರಮಕ್ಕೆ ಟಾಟಾ ಟ್ರಸ್ಟ್‌ನ ನಿಕಟಪೂರ್ವ ಸಿಒಒ ಡಾ. ಹರೀಶ್ ಕೃಷ್ಣಸ್ವಾಮಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅವರು ಮಾದಕ ದ್ರವ್ಯ ಸೇವನೆಯು ಮಿದುಳಿನ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಮಾತನಾಡಿ, ವ್ಯಸನದಿಂದ ಹೊರಬರಲು ಸೂಕ್ತ ಸಮಯದಲ್ಲಿ ನೆರವು ಪಡೆಯುವುದರ ಮಹತ್ವವನ್ನು ವಿವರಿಸಿದರು. ಸ್ನೇಹಿತರು ಅಥವಾ ಇತರರು ದುರಭ್ಯಾಸಗಳಿಗೆ ಪ್ರಚೋದಿಸಿದಾಗ ವಿದ್ಯಾರ್ಥಿಗಳು ಧೈರ್ಯವಾಗಿ ‘ಇಲ್ಲ’ ಎಂದು ಹೇಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್ ಭಾಗವಹಿಸಿ, ಮಾತನಾಡಿ, ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ತಿಳಿಸಿ, ವಿಶೇಷವಾಗಿ ಯುವಜನತೆ ತಮ್ಮ ಜೀವನದಲ್ಲಿ ಜವಾಬ್ದಾರಿಯುತ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯವನ್ನು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ದ.ಕ. ಜಿಲ್ಲೆಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್ ಅವರು, ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಮತ್ತು ಸ್ನೇಹಿತರನ್ನು ಜಾಗರೂಕತೆಯಿಂದ ಆಯ್ಕೆ ಮಾಡಿಕೊಳ್ಳಬೇಕು. ತಮ್ಮ ಗುರಿಯತ್ತ ಸದಾ ಗಮನ ಹರಿಸಬೇಕು ಮತ್ತು ಯಾವುದೇ ಅನಗತ್ಯ ವಿಷಯಗಳಿಗೆ ಆಸ್ಪದ ನೀಡಬಾರದು ಎಂದು ತಿಳಿಸಿದರು.

ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಕುಟುಂಬ ಮತ್ತು ಸಮಾಜದ ಬಗ್ಗೆ ಜವಾಬ್ದಾರಿ ಇರುತ್ತದೆ ಎಂಬುದನ್ನು ಸ್ಮರಿಸಿದ ಅವರು, ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ಸಮಾಜಘಾತಕ ಚಟುವಟಿಕೆಗಳಿಂದ ದೂರವಿರಬೇಕು. ಹಾಗೆಯೇ ತಮ್ಮ ಆಸಕ್ತಿಯ ಕ್ಷೇತ್ರಗಳನ್ನು ಗುರುತಿಸಿ ನಿಷ್ಠೆಯಿಂದ ಶ್ರಮಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲೆ ದಿವ್ಯಾ ಉಚ್ಚಿಲ್ ವಹಿಸಿದ್ದರು. 

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿದ್ದು, ಆರೋಗ್ಯಕರ, ಸುರಕ್ಷಿತ ಮತ್ತು ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವಾರುಣಿ ಆಚಾರ್ಯ ನಿರೂಪಿಸಿ, ಜ್ಯೇಷ್ಠ ಶೆಟ್ಟಿ ವಂದಿಸಿದರು.

ಒಂದು ವಾರಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಭಿತ್ತಿಚಿತ್ರ ರಚನಾ ಸ್ಪರ್ಧೆ, ಭಾಷಣ ಸ್ಪರ್ಧೆ, ರೀಲ್ ಮೇಕಿಂಗ್ ಹಾಗೂ ಬೀದಿನಾಟಕ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article