ಪಿಡಿಒಗಳ ಪ್ರತಿಭಟನೆ ಮುಂದೂಡಿಕೆ
ಮಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 21ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಹೋರಾಟ ಒಂದು ತಿಂಗಳ ಕಾಲ ಮುಂದೂಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಬೇಡಿಕೆಗಳಿಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಕಾಲಾವಕಾಶ ಕೋರಿದ್ದಾರೆ. ಅವರ ಮಾತಿಗೆ ಗೌರವ ನೀಡಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಘವು ಹೋರಾಟವನ್ನು ಒಂದು ತಿಂಗಳ ಕಾಲ ಮುಂದೂಡಲು ನಿರ್ಧರಿಸಿದೆ.
ಒಂದು ತಿಂಗಳ ನಂತರವೂ ಬೇಡಿಕೆಗಳು ಈಡೇರದಿದ್ದಲ್ಲಿ, ರಾಜ್ಯ ಕಾರ್ಯಕಾರಿ ಸಮಿತಿಯೊಂದಿಗೆ ಚರ್ಚಿಸಿ ರಾಜ್ಯಮಟ್ಟದ ಹೋರಾಟದ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.